ಬೆಂಗಳೂರಿನ ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ-ಡಿಸಿಎಂ ಡಾ.ಅಶ್ವತ್ಥ್‍ನಾರಾಯಣ

ಬೆಂಗಳೂರು, ಆ.27- ಬೆಂಗಳೂರಿನ ನಾಗರಿಕರಿಗೆ ಸುರಕ್ಷತೆ, ಮಹಿಳೆಯರ ರಕ್ಷಣೆ, ನಗರದ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ಸೇರಿದಂತೆ ಇಲ್ಲಿನ ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ನೂತನ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಹೇಳಿದರು.

ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳೆಯುತ್ತಿರುವ ಬೆಂಗಳೂರಿಗೆ ಮೂಲಭೂತ ಸೌಕರ್ಯ ಕಲ್ಪಿಸಿಕೊಡುವುದು ಬಹುದೊಡ್ಡ ಸವಾಲಾಗಿದೆ.ಮಹಿಳೆಯರಿಗೆ ರಕ್ಷಣೆ, ನಾಗರಿಕರ ಸುರಕ್ಷತೆ, ರಸ್ತೆ ನಿರ್ಮಾಣ, ಚರಂಡಿಯಲ್ಲಿರುವ ಹೂಳೆತ್ತುವುದು, ವಿದ್ಯುತ್ ದೀಪ, ರಸ್ತೆಗಳ ಅಗಲೀಕರಣ, ಸಂಚಾರ ಸಮಸ್ಯೆ ಸೇರಿದಂತೆ ನಾನಾ ರೀತಿಯ ಸಮಸ್ಯೆಗಳಿವೆ. ಇವುಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯೇ ಬಹುದೊಡ್ಡ ಸಮಸ್ಯೆಯಾಗಿದೆ.ಇದನ್ನು ನಿವಾರಿಸಲು ಸಂಘ-ಸಂಸ್ಥೆಗಳು, ಸಾರ್ವಜನಿಕರು ಸೇರಿದಂತೆ ಬೇರೆ ಬೇರೆ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಪರಿಣಿತರ ಅನುಭವವನ್ನು ಪಡೆಯಲಾಗುವುದು.ನನ್ನ ಅಧಿಕಾರಾವಧಿಯಲ್ಲಿ ಎಷ್ಟು ಸಾಧ್ಯವೋ ಅಷ್ಟು ಸಮಸ್ಯೆಗಳನ್ನು ನಿವಾರಿಸಿ ಅಭಿವೃದ್ಧಿಗೆ ಒತ್ತು ನೀಡುತ್ತೇನೆ ಎಂದರು.

ನಾನು ಉಪಮುಖ್ಯಮಂತ್ರಿಯಾಗುತ್ತೇನೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಸಚಿವ ಸ್ಥಾನದ ಆಕಾಂಕ್ಷಿಯೂ ಆಗಿರಲಿಲ್ಲ. ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನನ್ನ ಮೇಲೆ ವಿಶ್ವಾಸವಿಟ್ಟು ಈ ಜವಾಬ್ದಾರಿ ನೀಡಿದ್ದಾರೆ.ಯಾವುದೇ ಜಾತಿ, ಧರ್ಮ, ತಾರತಮ್ಯ ಮಾಡದೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಆಶ್ವಾಸನೆ ನೀಡಿದರು.

ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದ ವೇಳೆ ನಗರಕ್ಕೆ ಸಾಕಷ್ಟು ಒತ್ತು ನೀಡಲಾಗಿತ್ತು.ಪ್ರಗತಿಯಲ್ಲಿರುವ ಹಾಗೂ ನೆನೆಗುದಿಗೆ ಬಿದ್ದಿರುವ ಕಾರ್ಯಕ್ರಮಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲಾಗುವುದು.ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುತ್ತೇನೆ ಎಂದು ಹೇಳಿದರು.

ಪಕ್ಷದಲ್ಲಿಯಾವುದೇ ರೀತಿಯ ಅಸಮಾಧಾನವಿಲ್ಲ. ಸಣ್ಣಪುಟ್ಟ ಗೊಂದಲಗಳಿದ್ದರೆ ವರಿಷ್ಠರು ಪರಿಹರಿಸುತ್ತಾರೆ.ಯಾರೊಬ್ಬರೂ ಇಂತಹದ್ದೇ ಸ್ಥಾನಮಾನ ಬೇಕೆಂದು ಪಟ್ಟು ಹಿಡಿದಿಲ್ಲ. ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಒಂದೆರಡು ದಿನಗಳಲ್ಲಿ ನಿವಾರಣೆಯಾಗುತ್ತವೆ. ರಾಜ್ಯದ ಜನತೆಯ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡುತ್ತೇವೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಕೇಂದ್ರದಲ್ಲಿ ಯಾವ ರೀತಿ ಸ್ವಚ್ಛ ಹಾಗೂ ಸುಭದ್ರ ಆಡಳಿತ ನೀಡುತ್ತಿದ್ದಾರೋ ಅದರಂತೆ ಮುಖ್ಯಮಂತ್ರಿ ಹಾಗೂ ಸಂಪುಟದ ಸಚಿವರು ಕೆಲಸ ಮಾಡುತ್ತಾರೆ.ಸ್ಥಾನಮಾನಕ್ಕಿಂತ ರಾಜ್ಯವನ್ನು ಅಭಿವೃದ್ಧಿ ಪಡಿಸುವುದೇ ನಮ್ಮ ಗುರಿ.ಇತ್ತೀಚೆಗೆ ರಾಜ್ಯದ ನಾನಾ ಕಡೆ ಅತಿವೃಷ್ಟಿಯಿಂದ ಜನರು ಸಂಕಷ್ಟದಲ್ಲಿದ್ದಾರೆ. ಅವರ ಕಣ್ಣೊರೆಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದರು.
ಮನೆ ಮಠ ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿರುವವರಿಗೆ ಸರ್ಕಾರ ಅಗತ್ಯ ನೆರವು ನೀಡಲಿದೆ.ಯಾರೊಬ್ಬರೂ ಆತಂಕಕ್ಕೆ ಒಳಗಾಗಬಾರದು ಎಂದು ಅಶ್ವತ್ಥನಾರಾಯಣ ಮನವಿ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ