ಬಿಬಿಎಂಪಿಯಿಂದ ವಿಷನ್ ಡಾಕ್ಯುಮೆಂಟ್ ಸಿದ್ಧತೆ-ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್

ಬೆಂಗಳೂರು, ಆ.28- ಸಿಲಿಕಾನ್ ಸಿಟಿ ಬೆಂಗಳೂರನ್ನು ಅಂತಾರಾಷ್ಟ್ರೀಯ ಸಿಟಿಯನ್ನಾಗಿ ಮಾರ್ಪಾಡು ಮಾಡಲು ವಿಷನ್ ಡಾಕ್ಯುಮೆಂಟ್ ಸಿದ್ಧಪಡಿಸಲಾಗುತ್ತಿದೆ ಎಂದು ಬಿಬಿಎಂಪಿ ನೂತನ ಆಯುಕ್ತ ಅನಿಲ್‍ಕುಮಾರ್ ಇಂದಿಲ್ಲಿ ತಿಳಿಸಿದರು.

ನಿರ್ಗಮಿತ ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಂದ ಬೆಳ್ಳಿ ಬ್ಯಾಟನ್ ಮತ್ತು ಕೆಎಂಸಿ ಕಾಯ್ದೆ ಪುಸ್ತಕ ಪಡೆಯುವ ಮೂಲಕ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ವಿಶ್ವ ವಿಖ್ಯಾತಿ ಪಡೆದಿರುವ ನಮ್ಮ ನಗರಕ್ಕೆ ತಕ್ಕಂತಹ ಗೌರವ ಕೊಡಬೇಕಾಗಿದೆ.ಇದಕ್ಕಾಗಿ ಮುಂದಿನ 30 ವರ್ಷದಲ್ಲಿ ಬೆಂಗಳೂರು ಬೆಳವಣಿಗೆ ಕುರಿತಂತೆ ವಿಷನ್ ಡಾಕ್ಯುಮೆಂಟ್ ಸಿದ್ಧಪಡಿಸಲಾಗುತ್ತಿದ್ದು, ಈ ಯೋಜನೆಗೆ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಸಹಕಾರ ನೀಡಬೇಕೆಂದು ಅವರು ಮನವಿ ಮಾಡಿಕೊಂಡರು.

ಪರಿಸರ ಮಾಲಿನ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಎಲ್ಲಾ ನಾಗರಿಕರು ಪರಿಸರ ಸ್ನೇಹಿ ಗಣಪತಿ ಹಬ್ಬ ಆಚರಿಸಬೇಕು ಎಂದು ಅವರು ಮನವಿ ಮಾಡಿಕೊಂಡರು.

ಇಂದಿರಾ ಕ್ಯಾಂಟೀನ್ ಸರ್ಕಾರದ ಯೋಜನೆಯಾಗಿರುವುದರಿಂದ ಬಿಬಿಎಂಪಿಯಿಂದ ಕ್ಯಾಂಟಿನ್ ನಡೆಸಿಕೊಂಡು ಹೋಗಲು ಸಾಧ್ಯವಾಗುವುದಿಲ್ಲ. ಹೀಗಾಗಿ ಈ ಕುರಿತಂತೆ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತೇನೆ ಎಂದು ಭರವಸೆ ನೀಡಿದರು.
ಟೆಂಡರ್ ಶೂರ್ , ವೈಟ್ ಟ್ಯಾಪಿಂಗ್ ಕಾಮಗಾರಿಗಳ ಬಗ್ಗೆ ತನಿಖೆ ನಡೆಸಲು ಕಮಿಟಿ ರಚನೆ ಮಾಡಲಾಗಿದ್ದು , ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ನ್ಯಾಯಾಲಯದ ಸೂಚನೆ ಇರುವ ಹಿನ್ನೆಲೆಯಲ್ಲಿ ಎಂತಹ ಪ್ರಭಾವಿ ವ್ಯಕ್ತಿಗಳು ರಾಜಕಾಲುವೆ ಒತ್ತುವರಿ ಮಾಡಿದ್ದರೂ ಅದನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ