ಮೈತ್ರಿ ಸರ್ಕಾರ ಅನುಮೋದನೆ ನೀಡಿದ್ದ ಗ್ರಾಮೀಣ ರಸ್ತೆ ಕಾಮಗಾರಿಗಳ ಸ್ಥಗಿತ

ಬೆಂಗಳೂರು, ಆ.31- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿದ್ದ ಗ್ರಾಮೀಣ ರಸ್ತೆ ಕಾಮಗಾರಿಗಳನ್ನು ಸ್ಥಗಿತಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೂಚಿಸಿದೆ.

ಕಳೆದ 2018-19 ಹಾಗೂ ಪ್ರಸಕ್ತ ಸಾಲಿನಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿದ ಗ್ರಾಮೀಣ ರಸ್ತೆ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಯಥಾಸ್ಥಿತಿ ಕಾಪಾಡಲು ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್ಲ ಜಿಪಂಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

125 ವಿವಿಧ ರಸ್ತೆ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ಪತ್ರದಲ್ಲಿ ಸೂಚಿಸಲಾಗಿದೆ.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮೀಣ ಮೂಲ ಸೌಕರ್ಯ ನಿರ್ದೇಶಕರು ಗ್ರಾಮೀಣ ರಸ್ತೆ ಕಾಮಗಾರಿ ಕೈಗೊಳ್ಳಲು ವಿಶೇಷ ಮಂಜೂರಾತಿ ನೀಡಿ ಹೊರಡಿಸಲಾಗಿದ್ದ ಆಡಳಿತಾತ್ಮಕ ಅನುಮೋದನೆ ಆದೇಶಕ್ಕೆ ತಡೆ ನೀಡಿದ್ದಾರೆ.
ಮುಂದಿನ ಆದೇಶದವರೆಗೆ ವಿಶೇಷ ಮಂಜೂರಾತಿ ನೀಡಿದ್ದ ಆದೇಶಗಳನ್ನು ಅನುಷ್ಠಾನ ಮಾಡದಂತೆ ಮತ್ತು ಯಥಾಸ್ಥಿತಿ ಕಾಪಾಡುವಂತೆ ಸೂಚಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ