ಬೆಂಗಳೂರು, ಸೆ.1- ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
ಇಂದಿನಿಂದ ಮೂರ್ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುವ ಲಕ್ಷಣಗಳು ಕಂಡುಬಂದಿವೆ.
ವಾಯುಭಾರ ಕುಸಿತದ ಪರಿಣಾಮದಿಂದಾಗಿ ಮತ್ತೆ ಕರಾವಳಿ, ಮಲೆನಾಡು ಹಾಗೂ ಹೈದರಾಬಾದ್ ಕರ್ನಾಟಕ ಭಾಗದ ಕೆಲವು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು.
ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ ವಾತಾವರಣದಲ್ಲಿ ಬದಲಾವಣೆ ಉಂಟಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ಒಳನಾಡಿನ ಹಲವು ಭಾಗಗಳಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ. ಆದರೆ, ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ.
ರಾಜ್ಯದ ದಕ್ಷಿಣ ಒಳನಾಡು ಹಾಗೂ ಪೂರ್ವಭಾಗದಲ್ಲಿ ಸೆ.4, 5ರಂದು ಸ್ವಲ್ಪ ಹೆಚ್ಚಿನ ಪ್ರಮಾಣದ ಮಳೆಯಾಗುವ ಲಕ್ಷಣಗಳು ಕಂಡುಬರುತ್ತಿವೆ ಎಂದು ಅವರು ತಿಳಿಸಿದರು.