
ಬೆಂಗಳೂರು, ಸೆ.3-ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ವಿಚಾರಣೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಬಹುತೇಕ ತಾರ್ಕಿಕ ಅಂತ್ಯ ಕಾಣುವ ಸಾಧ್ಯತೆ ಇದೆ.
ಕಳೆದ ಶುಕ್ರವಾರದಿಂದಲೂ ಸರ್ಕಾರಿ ರಜಾ ದಿನ ಭಾನುವಾರ ಹೊರತುಪಡಿಸಿ ನಿರಂತರವಾಗಿ ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಲವಾರು ಪ್ರಶ್ನೆಗಳನ್ನು ಕೇಳಿ ಮಾಹಿತಿ ಕಲೆ ಹಾಕುತ್ತಿದ್ದಾರೆ.
ನಿನ್ನೆ ಗೌರಿ ಗಣೇಶ ಹಬ್ಬದ ಪ್ರಯುಕ್ತ ಹಿರಿಯರಿಗೆ ಪೂಜೆ ಮಾಡುವ ಸಂಪ್ರದಾಯವಿದ್ದು, ಒಂದು ದಿನ ಕಾಲಾವಕಾಶ ನೀಡುವಂತೆ ಡಿ.ಕೆ.ಶಿವಕುಮಾರ್ ಮಾಡಿಕೊಂಡ ಮನವಿಗೂ ಮಾನ್ಯತೆ ನೀಡದೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಇಂದು ಬೆಳಗ್ಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು. ಹಾಗಾಗಿ 11 ಗಂಟೆ ಸುಮಾರಿಗೆ ಡಿ.ಕೆ.ಶಿವಕುಮಾರ್ ಅವರು ಲೋಕನಾಯಕ ಭವನದ 6ನೇ ಮಹಡಿಯಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಹಾಜರಾದರು.
ಡಿ.ಕೆ.ಶಿವಕುಮಾರ್ ಅವರ ವಿಚಾರಣೆ ಕುರಿತಂತೆ ಪರ-ವಿರೋಧ ಚರ್ಚೆಗಳು ವ್ಯಾಪಕವಾಗಿವೆ. ಬಿಜೆಪಿ ನಾಯಕರು ಮತ್ತು ಬೆಂಬಲಿಗರು ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ವಾದಿಸುತ್ತಾ ವಿಚಾರಣೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ.
ಆದರೆ ಇದು ಸಂಪೂರ್ಣ ರಾಜಕೀಯ ಪ್ರೇರಿತ.ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಬಿಜೆಪಿ ಮತ್ತು ಅದರ ಅಂಗ ಪಕ್ಷಗಳ ಯಾವ ನಾಯಕರ ಮೇಲೆ ಜಾರಿ ನಿರ್ದೇಶನಾಲಯ, ಸಿಬಿಐ ಇಷ್ಟು ಕಠಿಣವಾಗಿ ವರ್ತಿಸಿಲ್ಲ. ಕರ್ನಾಟಕದಲ್ಲಿ 17 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಎದುರಾಗುವ ಸಂದರ್ಭದಲ್ಲಿ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಬ್ಲ್ಯಾಕ್ಮೇಲ್ ಮಾಡುವ ಹುನ್ನಾರ ನಡೆದಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ.
ಒಂದು ಹಂತದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸುವ ಪ್ರಯತ್ನಗಳು ನಡೆದಿವೆ ಎಂಬ ವದಂತಿಗಳು ಹಬ್ಬಿದ್ದವು. ಸತತ ಮೂರು ದಿನಗಳ ವಿಚಾರಣೆ ಮುಗಿದಿದೆ. ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಗಳು ಕೇಳುವ ಎಲ್ಲಾ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿದ್ದಾರೆ. ಹೀಗಾಗಿ ಏಕಾಏಕಿ ಬಂಧಿಸಲು ಸಾಧ್ಯವಾಗದೆ ಬೇರೆ ರೀತಿಯ ಪ್ರಯತ್ನಗಳನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಾಡುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ.
ಮೂಲಗಳ ಪ್ರಕಾರ ಬಹುತೇಕ ಇಂದು ವಿಚಾರಣೆ ತಾರ್ಕಿಕ ಅಂತ್ಯಕ್ಕೆ ಬರುವ ಸಾಧ್ಯತೆ ಇದೆ. ವಿಚಾರಣೆ ಪೂರ್ಣಗೊಳಿಸಿ ಡಿ.ಕೆ.ಶಿವಕುಮಾರ್ ಅವರನ್ನು ವಾಪಸ್ ಕಳುಹಿಸಬಹುದು ಅಥವಾ ಸಮಾಧಾನಕರ ಉತ್ತರ ಸಿಕ್ಕಿಲ್ಲ ಎಂಬ ಕಾರಣಕ್ಕಾಗಿ ಬಂಧಿಸಲೂಬಹುದು. ಈ ಎರಡೂ ಸಾಧ್ಯತೆಗಳ ಹೊರತಾಗಿ ಮತ್ತಷ್ಟು ದಿನ ವಿಚಾರಣೆಯನ್ನು ಮುಂದುವರೆಸಲೂಬಹುದು ಎಂದು ಹೇಳಲಾಗುತ್ತಿದೆ.
ಒಟ್ಟಿನಲ್ಲಿ ಡಿ.ಕೆ.ಶಿವಕುಮಾರ್ ಅವರ ವಿಚಾರಣೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ರಾಜಕೀಯ ಕೆಸರೆರಚಾಟಕ್ಕೂ ಅವಕಾಶ ಮಾಡಿಕೊಟ್ಟಿದೆ.