ಬೆಂಗಳೂರು,ಸೆ.3- ಇದೇ 7ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರಮೋದಿ ಅವರು ಆಗಮಿಸಲಿದ್ದು, ಅತಿವೃಷ್ಟಿಯಿಂದ ರಾಜ್ಯದಲ್ಲಿ ಉಂಟಾಗಿರುವ ಹಾನಿ ಬಗ್ಗೆ ಮತ್ತೊಮ್ಮೆ ಮನವರಿಕೆ ಮಾಡಿಕೊಡಲಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿಯವರು 7ರಂದು ವಿಶೇಷ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬರಲಿದ್ದಾರೆ.ಈ ವೇಳೆ ಅವರಿಗೆ ರಾಜ್ಯದ ವಸ್ತು ಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟು ಹೆಚ್ಚಿನ ಪರಿಹಾರ ನೀಡುವಂತೆ ಬೇಡಿಕೆ ಸಲ್ಲಿಸುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕೈಗೊಂಡ ಕ್ರಮಗಳು, ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಸೇರಿದಂತೆ ಎಲ್ಲ ವಿವರಗಳನ್ನು ನೀಡಲಿದ್ದೇವೆ.
ನಮಗೆ ಕೇಂದ್ರದಿಂದ ಹೆಚ್ಚಿನ ಪರಿಹಾರ ಸಿಗುವ ಸಂಭವವಿದೆ. ಈಗಾಗಲೇ ರಾಜ್ಯಕ್ಕೆ ಆಗಮಿಸಿದ ಅಧಿಕಾರಿಗಳ ತಂಡ ಕೇಂದ್ರಕ್ಕೆ ವರದಿಯನ್ನು ಸಲ್ಲಿಸಿದೆ ಎಂದರು.
ಇದೇ 6ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಅಂದು ಕೆಲವು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು. ಮಹಾರಾಷ್ಟ್ರ ಮುಖ್ಯಮಂತ್ರಿಗಳ ಮನವಿ ಮೇರೆಗೆ ಮುಂಬೈಗೆ ತೆರಳತ್ತಿದ್ದೇನೆ. ಮಹದಾಯಿ ನದಿ ನೀರು ಹಂಚಿಕೆ, ಕೃಷ್ಣ ನದಿ ಪ್ರವಾಹದಿಂದ ಉಂಟಾಗುತ್ತಿರುವ ಪರಿಣಾಮಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡುವುದಾಗಿ ವಿವರಿಸಿದರು.