ಬೆಂಗಳೂರು,ಸೆ.4- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇದು ರಾಜಕೀಯ ದುರದ್ದೇಶದ ಪರಮಾವಧಿ ಎಂದು ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಅನಧಿಕೃತ ತುರ್ತು ಪರಿಸ್ಥಿತಿಯನ್ನು ನೋಡುವಂತಾಗಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ ಎಂದು ಟೀಕಿಸಿದ್ದಾರೆ.
ಇಡಿ ಅಧಿಕಾರಿಗಳು ಕರೆದಾಗಲೆಲ್ಲ ಡಿ.ಕೆ.ಶಿವಕುಮಾರ್ ಹಾಜರಾಗಿ ಅವರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದಲೂ ಇಡಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಆದರೂ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಕಾನೂನು ರೀತಿ ಕ್ರಮ ಕೈಗೊಳ್ಳಲು ನಮ್ಮ ಅಭ್ಯಂತರವೇನೂ ಇಲ್ಲ ಎಂದರು.
ಆದರೆ ಕೇಂದ್ರ ಸರ್ಕಾರ ಸಿಬಿಐ, ಆದಾಯ ತೆರಿಗೆ ಹಾಗೂ ಜಾರಿ ನಿರ್ದೇಶನಾಲಯದಂತಹ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬ ಆರೋಪವಿದೆ. ಪ್ರತಿಪಕ್ಷದ ನಾಯಕರನ್ನು ಮಣಿಸಲು ಕೇಂದ್ರ ಸರ್ಕಾರ ಇಂತಹ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ಇದಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ನೀಡಿರುವ ಹೇಳಿಕೆ ಪುಷ್ಠಿ ಕೊಡುತ್ತದೆ ಎಂದು ಅವರು ದೂರಿದ್ದಾರೆ.
ಗಣೇಶ ಹಬ್ಬದ ಆಚರಣೆಗೂ ಅವಕಾಶ ಕೊಡದೆ ನಿರಂತರ ವಿಚಾರಣೆಗೊಳಪಡಿಸಿದ ಇಡಿ, ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ಆರೋಪದ ಮೇಲೆ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಖಂಡನೆ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಬಂಧಿಸಿರುವುದನ್ನು ಬೆಂಗಳೂರು ಮಹಾನಗರ ಜೆಡಿಎಸ್ ಘಟಕ ಖಂಡಿಸಿದೆ.
ರಾಜಕೀಯ ದುರದ್ದೇಶದಿಂದ ಸಂವಿಧಾನಬದ್ಧ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐಗಳನ್ನು ದುರುಪಯೋಗಪಡಿಸಿಕೊಂಡು ವಿರೋಧ ಪಕ್ಷಗಳು ಮತ್ತು ವಿರೋಧ ಪಕ್ಷದ ನಾಯಕರನ್ನು ಬಂಧಿಸುವುದರ ಮೂಲಕ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸಲಾಗುತ್ತಿದೆ ಎಂದು ಬೆಂಗಳೂರು ಮಹಾನಗರ ಜೆಡಿಎಸ್ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಖಂಡಿಸಿದ್ದಾರೆ.
ಬಿಜೆಪಿಯ ಇಂತಹ ಧೋರಣೆಗೆ ದೇಶದ ಜನತೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.