ಬೆಂಗಳೂರು, ಸೆ.4-ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನದಿಂದ ಆಕ್ರೋಶ ಭುಗಿಲೆದ್ದಿದ್ದು, ರಾಜ್ಯಾದ್ಯಂತ ಉಗ್ರ ಸ್ವರೂಪದ ಪ್ರತಿಭಟನೆಗಳು ನಡೆದಿದ್ದು, ಅಲ್ಲಲ್ಲಿ ಕಲ್ಲುತೂರಾಟ, ರಸ್ತೆತಡೆ, ಬಸ್ಗಳಿಗೆ ಬೆಂಕಿ ಹಚ್ಚಿರುವ ಘಟನೆಗಳಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಡಿ.ಕೆ.ಶಿವಕುಮಾರ್ ಅವರ ತವರು ರಾಮನಗರ ಜಿಲ್ಲೆ ಸಂಪೂರ್ಣ ಸ್ತಬ್ಧಗೊಂಡಿದ್ದು, ಬೆಳಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಬೆಂಗಳೂರು, ಕನಕಪುರ, ಮಂಡ್ಯ, ಮೈಸೂರು, ಚನ್ನರಾಯಪಟ್ಟಣ, ತುಮಕೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ರಾಯಚೂರು, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ಚಾಮರಾಜನಗರ ಸೇರಿದಂತೆ ರಾಜ್ಯದ ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು, ಡಿಕೆಶಿ ಬೆಂಬಲಿಗರು ಬಂಧನ ಖಂಡಿಸಿ ಪ್ರತಿಭಟನೆಗಳನ್ನು ನಡೆಸಿದರು.
ಬಂಧನ ವಿರೋಧಿಸಿ ಕೇರಳ, ತಮಿಳುನಾಡು, ಆಂಧ್ರಪ್ರದೇಶದಲ್ಲೂ ಕೂಡ ಪ್ರತಿಭಟನೆ ನಡೆಸಲಾಗಿದೆ.
ರಾಮನಗರದಲ್ಲಿ ಬೆಳಗ್ಗಿನಿಂದಲೇ ವ್ಯಾಪಾರಸ್ಥರು ತಮ್ಮ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ಈ ಪ್ರತಿಭಟನೆಗೆ ಜೆಡಿಎಸ್ ಸಹ ಬೆಂಬಲ ನೀಡಿತ್ತು.
ಕನಕಪುರದಲ್ಲಿ ಬಸ್ಗಳ ಮೇಲೆ ಕಲ್ಲುತೂರಾಟ ನಡೆಸಿದ್ದು, ಎರಡು ಬಸ್ಗಳಿಗೆ ಬೆಂಕಿ ಹಚ್ಚಲಾಗಿದೆ. 12 ಬಸ್ಗಳು ಕಲ್ಲುತೂರಾಟದಿಂದ ಜಖಂಗೊಂಡಿವೆ. ಈ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಸ್ ಸಂಚಾರ ಸ್ಥಗಿತ: ಪ್ರತಿಭಟನೆಯ ಕಾವು ಹೆಚ್ಚಾದಂತೆ ರಾಮನಗರದಲ್ಲಿ ಬಸ್ ಸಂಚಾರ ಅಸ್ತವ್ಯಸ್ತವಾಗಿದೆ. ಕಲ್ಲು ತೂರಾಟ, ಬೆಂಕಿ ಹಚ್ಚಿದ ಪ್ರಕರಣಗಳು ನಡೆದ ಹಿನ್ನಲೆಯಲ್ಲಿ ಕೆಎಸ್ಆರ್ಟಿಸಿ ಡಿಪೋದಿಂದ ಯಾವುದೇ ಬಸ್ಗಳನ್ನು ರಸ್ತೆಗೆ ಇಳಿಸಿಲ್ಲ.
ಪ್ರತಿಭಟನೆ ವೇಳೆ ಸಂಚರಿಸುತ್ತಿದ್ದ ವಾಹನಗಳಿಗೆ ಅನುವು ಮಾಡಿಕೊಡಲಾಗಿತ್ತು. ಒಟ್ಟಾರೆ ರಾಮನಗರದಲ್ಲಿ ಸಂಪೂರ್ಣ ಪ್ರತಿಭಟನೆ ಯಶಸ್ವಿಯಾಗಿದೆ.
ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಕನಕಪುರ, ರಾಮನಗರದಲ್ಲಿ ರಸ್ತೆ ತಡೆ ನಡೆಸಿ, ಟೈರ್ಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಮಂಡ್ಯ, ಮದ್ದೂರು, ಮೈಸೂರು ಮುಂತಾದೆಡೆ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರಿಂದ ಬೆಂಗಳೂರು-ಮೈಸೂರು ನಡುವೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಇತ್ತ ಬೆಂಗಳೂರಿನಲ್ಲೂ ಪ್ರತಿಭಟನೆಯ ಕಾವು ಹೆಚ್ಚಾಗಿತ್ತು. ಬೆಳ್ಳಂಬೆಳಗ್ಗೆ ಸ್ಯಾಂಕಿ ಕೆರೆ ಬಳಿ ಖಾಸಗಿ ಬಸ್ವೊಂದರ ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಲಾಗಿದೆ.
ಕಾಂಗ್ರೆಸ್ ಕಾರ್ಯಕರ್ತರು, ಬೆಂಬಲಿಗರು ಬಂಧನ ವಿರೋಧಿಸಿ ಪ್ರತಿಭಟನೆ ನಡೆಸಿ ಬಿಜೆಪಿ ಸರ್ಕಾರದ ಹುನ್ನಾರವೆಂದು ಆರೋಪಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಡಿಕೆಶಿ ಬಂಧನ ವಿರೋಧಿಸಿ ಮೈಸೂರಿನ ಗಾಂಧಿವೃತ್ತದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ಮಾಜಿ ಶಾಸಕ ಎಂ.ಕೆ.ಸೋಮಶೇಖರ ನೇತೃತ್ವದಲ್ಲಿ ಮೈಸೂರು-ನಂಜನಗೂಡು ರಸ್ತೆಯ ಗುಂಡೂರಾವ್ ನಗರದ ಬಳಿ ಪ್ರತಿಭಟನೆ ನಡೆಸಲಾಯಿತು. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಪ್ರತಿಭಟನೆಯಿಂದಾಗಿ ಮೈಸೂರು-ನಂಜನಗೂಡು ನಡುವೆ ಕೆಲ ಕಾಲ ಸಂಚಾರದಲ್ಲಿ ವ್ಯತ್ಯಯವಾಯಿತು.
ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಶಿವಕುಮಾರ್ ಬಂಧನ ಖಂಡಿಸಿ ಬಿಜೆಪಿ ಧೋರಣೆ ವಿರೋಧಿಸಿದರು.
ಇತ್ತ ತುಮಕೂರು, ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ತುಮಕೂರು ಟೌನ್ ವೃತ್ತದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೇಂದ್ರಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಐಟಿ, ಇಡಿ, ಸಿಬಿಐ ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಕೈಗೊಂಬೆಗಳಂತೆ ವರ್ತಿಸುತ್ತಿವೆ. ತಕ್ಷಣವೇ ಡಿ.ಕೆ.ಶಿವಕುಮಾರ್ ಅವರನ್ನು ಬಿಡುಗಡೆ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಟೈರಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಟೌನ್ಹಾಲ್ ಬಳಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮಾಡಿದರು. ರಾಷ್ಟ್ರೀಯ ಹೆದ್ದಾರಿ 207 ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಕಲಬುರಗಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ್ ಗುತ್ತೇದಾರ್ ಕಾಳಗಿ ಅವರ ನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಡಿಕೆಶಿ ಬಂಧನ ಖಂಡಿಸಿ ಡಿಸಿಸಿ ಕಚೇರಿಯಿಂದ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಲಾಯಿತು.
ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ವಿಪಕ್ಷ ನಾಯಕರನ್ನು ಮಟ್ಟ ಹಾಕಲು ಮಾಡುತ್ತಿರುವ ಪ್ರಯತ್ನ ಬಹಳ ಕಾಲ ನಡೆಯುವುದಿಲ್ಲ. ಸರ್ವಾಧಿಕಾರಿ ಧೋರಣೆ ವಿರುದ್ಧ ನಮ್ಮ ಪ್ರತಿಭಟನೆ ನಿರಂತರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕುಣಿಗಲ್, ಕೋಲಾರ, ಚಿಕ್ಕಬಳ್ಳಾಪುರ ಮುಂತಾದೆಡೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಡಿಕೆಶಿ ಬೆಂಬಲಿಗರು ಬಂಧನ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು.
ಕೊಪ್ಪಳ ಮಾಜಿ ಶಾಸಕ ಶಿವರಾಜ್ ತಂಗಡಗಿ ನೇತೃತ್ವದಲ್ಲಿ ಡಿಕೆಶಿ ಬೆಂಬಲಿಸಿ ಪ್ರತಿಭಟನೆ ನಡೆಸಿದರೆ, ಅತ್ತ ಉಡುಪಿಯಲ್ಲಿ ಜ್ಯೋತಿ ವೃತ್ತದಲ್ಲಿ ಕಾಂಗ್ರೆಸ್ ಮುಖಂಡ ವಿನಯ್ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬಾಗಲಕೋಟೆಯಲ್ಲಿ ಮಾಜಿ ಸಚಿವರಾದ ಎಸ್.ಆರ್.ಪಾಟೀಲ್, ಎಚ್.ವೈ.ಮೇಟಿ ನೇತೃತ್ವದಲ್ಲಿ ಡಿ.ಕೆ.ಶಿವಕುಮಾರ್ ಪರವಾಗಿ ಪ್ರತಿಭಟನೆ ನಡೆಸಲಾಯಿತು.
ಚಾಮರಾಜನಗರದ ಹನೂರಿನಲ್ಲಿ ಸಂಪೂರ್ಣ ಬಂದ್ ಆಚರಿಸುವ ಮೂಲಕ ಪ್ರತಿಭಟನೆ ನಡೆಸಿ ಡಿ.ಕೆ.ಶಿವಕುಮಾರ್ಗೆ ಬೆಂಬಲ ಘೋಷಿಸಿ ಬಂಧನದ ಕ್ರಮವನ್ನು ಖಂಡಿಸಿದರು.