ಮುಂಬೈ, ಸೆ.5- ದೇಶದ ವಾಣಿಜ್ಯ ನಗರಿ ಮುಂಬೈ ಸೇರಿದಂತೆ ಮಹಾರಾಷ್ಟ್ರದ ವಿವಿಧೆಡೆ ಧಾರಾಕಾರ ಮಳೆಯಿಂದ ಇಂದೂ ಕೂಡ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ಇಂದೂ ಕೂಡ ಮುಂದುವರೆದಿದ್ದು, ಮುಂಬೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಲಸಂಕಷ್ಟ ಸೃಷ್ಟಿಸಿದೆ.
ವರುಣಾರ್ಭಟದಿಂದ ನಗರದ ಬಹುತೇಕ ಪ್ರದೇಶಗಳ ರಸ್ತೆಗಳು ಜಲಾವೃತವಾಗಿದ್ದು, ವಾಹನಗಳ ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ.
ರೈಲ್ವೆ ಹಳಿಗಳ ಮೇಲೆ ನೀರು ನಿಂತಿರುವುದರಿಂದ ಇಂಟರ್‍ಸಿಟಿ ಎಕ್ಸ್‍ಪ್ರೆಸ್‍ಗಳು ಸೇರಿದಂತೆ ಸಬ್ ಅರ್ಬನ್ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು, ಜನರು ಪರದಾಡುವಂತಾಗಿದೆ.
ಮಳೆ ಮತ್ತು ಪ್ರತೀಕೂಲ ಹವಾಮಾನದಿಂದಾಗಿ 20 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ.
ಛತ್ರಪತಿ ಶಿವಾಜಿ ಮಹರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಗಮಿಸುವ ಮತ್ತು ನಿರ್ಗಮಿಸುವ 300ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬವಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ಇಂದೂ ಸಹ ರಜೆ ಘೋಷಿಸಲಾಗಿದೆ.