ನವದೆಹಲಿ, ಸೆ.6- ಕಾನೂನುಬಾಹಿರ ಚಟುವಟಿಕೆಗಳ(ತಡೆಗಟ್ಟುವ) ಕಾಯ್ದೆ(ಯುಎಪಿಎ)ಗೆ ಮಾಡಲಾಗಿರುವ ತಿದ್ದುಪಡಿಗಳ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಸಂಬಂಧ ಸುಪ್ರೀಂಕೋರ್ಟ್ ಇಂದು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ಪ್ರತ್ಯುತ್ತರ ಕೇಳಿದೆ.
ಯುಎಪಿಎಗೆ ತಿದ್ದುಪಡಿಗಳನ್ನು ಮಾಡುವ ಮೂಲಕ ನಾಗರಿಕರ ಮೂಲಭೂತ ಹಕ್ಕುಗಳಿಗೆ ಧಕ್ಕೆ ಉಂಟು ಮಾಡಲಾಗಿದೆ ಮತ್ತು ಯಾವುದೇ ವ್ಯಕ್ತಿಯನ್ನು ಭಯೋತ್ಪಾದಕ ಎಂದು ಘೋಷಿಸಲು ತನಿಖಾ ಸಂಸ್ಥೆಗಳಿಗೆ ಅಧಿಕಾರ ನೀಡಲಾಗಿದೆ ಇದು ಸರಿಯಾದ ಕ್ರಮವಲ್ಲ ಎಂಬುದೂ ಸೇರಿದಂತೆ ವಿವಿಧ ಅಂಶಗಳನ್ನು ಉಲ್ಲೇಖಿಸಿ ಕಾಯ್ದೆಯ ತಿದ್ದುಪಡಿಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಅರ್ಜಿಗಳನ್ನು ಸಲ್ಲಿಸಲಾಗಿದೆ.
ಈ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರನ್ನು ಒಳಗೊಂಡ ಪೀಠವು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ಪ್ರತ್ಯುತ್ತರ ಕೋರಿದೆ.
ಸಂಸತ್ತಿನಲ್ಲಿ ಕಾನೂನುಬಾಹಿರ ಚಟುವಟಿಕೆಗಳ(ತಡೆಗಟ್ಟುವ) ಕಾಯ್ದೆ(ಯುಎಪಿಎ)ಗೆ ತಿದ್ದುಪಡಿಗಳನ್ನು ಮಾಡುವ ವಿದೇಯಕ್ಕೆ ಅನುಮೋದನೆ ನೀಡಲಾಗಿತ್ತು.