ಬೆಂಗಳೂರು, ಸೆ.6- ಮಂಡ್ಯ ಜಿಲ್ಲೆ ಸಕ್ಕರೆ ಕಾರ್ಖಾನೆಯನ್ನು ಲೀಸ್ಗೆ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಮಂಡ್ಯ ಜನಪ್ರತಿನಿಧಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಉಳಿಸಿಕೊಳ್ಳುವ ಸಂಬಂಧ ಸಂಸದರು ಮತ್ತು ಶಾಸಕರಿಂದ ಅಭಿಪ್ರಾಯ ಪಡೆಯಲಾಗಿದೆ. ಇದರಂತೆ ಕೂಡಲೇ ಲೀಸ್ಗೆ ಕೊಡಲು ತೀರ್ಮಾನಿಸಿದ್ದೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದರು.
ಇನ್ನು ಮುಂದೆ ಲೀಸ್ ಮೂಲಕವೇ ಪಾಂಡವಪುರ ಸಕ್ಕರೆ ಕಾರ್ಖಾನೆ ಕಾರ್ಯ ನಿರ್ವಹಣೆ ಮಾಡಲಿದೆ. ರೈತರಿಗೂ ಇದರಿಂದ ಅನುಕೂಲವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೈ ಶುಗರ್ ಕಂಪನಿಯ 330 ನೌಕರರು ಸ್ವಯಂ ನಿವೃತ್ತಿ ಪಡೆಯಲು ಸಿದ್ಧರಾಗಿದ್ದಾರೆ. ಇದಕ್ಕಾಗಿ 22 ಕೋಟಿ ರೂ. ಬೇಕಾಗುತ್ತದೆ. ಅಲ್ಲಿನ ನೌಕರರಿಗೆ ವಿಆರ್ಎಸ್ ಕೊಡಿಸಲಿದ್ದೇವೆ ಎಂದು ತಿಳಿಸಿದರು.
ಮೈ ಶುಗರ್ ಕಂಪನಿಯನ್ನು ಲೀಸ್ಗೆ ಕೊಡಬೇಕೆ ಇಲ್ಲವೇ ಸರ್ಕಾರವೇ ನಿರ್ವಹಣೆ ಮಾಡಬೇಕೆ ಎಂಬುದರ ಬಗ್ಗೆ ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗುವುದು ಎಂದು ಹೇಳಿದರು.
ಒಂದು ವೇಳೆ ಕಾರ್ಖಾಣೆಯ ನಿರ್ವಹಣೆಯನ್ನು ನಾವೇ ನೋಡಿಕೊಂಡರೆ 25 ಕೋಟಿ ರೂ. ವೆಚ್ಚವಾಗುತ್ತದೆ. ಈಗಾಗಲೇ ಸಾಕಷ್ಟು ದುಡ್ಡು ನೀಡಿದ್ದೇವೆ. ಸರ್ಕಾರಕ್ಕೆ ಹೊರೆಯಾಗುವುದನ್ನು ತಪ್ಪಿಸಲು ಪರ್ಯಾಯ ಮಾರ್ಗ ಕಂಡುಕೊಳ್ಳಲಿದ್ದೇವೆ ಎಂದು ತಿಳಿಸಿದರು.
ಸಭೆಯಲ್ಲಿ ಸಂಸದೆ ಸುಮಲತಾ ಅಂಬರೀಶ್, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಶಾಸಕರಾದ ಸುರೇಶ್ ಗೌಡ, ಡಾ.ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ಶ್ರೀನಿವಾಸ್ ಸೇರಿದಂತೆ ಜಿಲ್ಲಾಧಿಕಾರಿಗಳು ಮತ್ತಿತರರು ಭಾಗವಹಿಸಿದ್ದರು.