ಬೆಂಗಳೂರು, ಸೆ.6- ಸಂಚಾರಿ ನಿಯಮ ಉಲ್ಲಂಘನೆಗಾಗಿ ಹೊಸದಾಗಿ ಜಾರಿ ಮಾಡಿರುವ ನಿಯಮಗಳಿಂದ ಜನಸಾಮಾನ್ಯರಿಗೆ ತೊಂದರೆಯಾಗಲಿದೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ವಿಧಿಸಬೇಕೆಂಬುದೇನೊ ನಿಜ. ಆದರೆ ಇಷ್ಟು ದೊಡ್ಡ ಪ್ರಮಾಣದಲ್ಲಿ ದಂಡ ಹಾಕಿದರೆ ಜನಸಾಮಾನ್ಯರ ಗತಿಯೇನು ಎಂದು ಪ್ರಶ್ನಿಸಿದರು.
ಕೇಂದ್ರ ಸರ್ಕಾರ ಯಾವ ಮಾನದಂಡಗಳನ್ನು ಇಟ್ಟುಕೊಂಡು ಹೊಸ ಕಾಯ್ದೆ ಜಾರಿ ಮಾಡಿದೆ ಎಂಬುದೇ ಅರ್ಥವಾಗುತ್ತಿಲ್ಲ. ಸಾರ್ವಜನಿಕರಿಗೆ ಸಂಚಾರಿ ನಿಯಮಗಳ ಬಗ್ಗೆ ಮನವರಿಕೆ ಮಾಡಿ ಜನಜಾಗೃತಿ ಮೂಡಿಸಬೇಕು. ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಒಂದೇ ಕಾರಣಕ್ಕೆ ಜನರಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
ಯಾವುದೇ ನಿಯಮಗಳು ಸಾರ್ವಜನಿಕರಿಗೆ ಅನುಕೂಲವಾಗಬೇಕೆ ಹೊರತು ಅನಾನುಕೂಲ ಉಂಟು ಮಾಡಬಾರದು. ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತ ಎಂದರು.