ನವದೆಹಲಿ/ವಾಷಿಂಗ್ಟನ್: ಜಮ್ಮು ಮತ್ತು ಕಾಶ್ಮೀರದ ಸಮಸ್ಯೆಯನ್ನು ಬಗೆಹರಿಸಲು ಸಹಾಯ ಮಾಡಲು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ.
ಯುಎಸ್ ನ ಉತ್ತರ ಕೆರೊಲಿನಾದ ಫಯೆಟ್ಟೆವಿಲ್ಲೆಯಲ್ಲಿ ಪ್ರಚಾರ ರ್ಯಾಲಿಗೆ ತೆರಳುವ ಮುನ್ನ ಶ್ವೇತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನತೆ “ಎರಡು ವಾರಗಳ ಹಿಂದೆ ಇದ್ದುದಕ್ಕಿಂತ ಸ್ವಲ್ಪ ಕಡಿಮೆಯಾಗಿದೆ. ನಾನು ಅವರಿಗೆ ಸಹಾಯ ಮಾಡಲು ಸಿದ್ಧನಿದ್ದೇನೆ. ಏಕೆಂದರೆ ಎರಡೂ ರಾಷ್ಟ್ರಗಳ ನಡುವೆ ಉತ್ತಮ ಸಂಬಂಧ ಹೊಂದಿದ್ದು, ಭಾರತ ಮತ್ತು ಪಾಕಿಸ್ತಾನ ಬಯಸುವುದಾದರೆ ಕಾಶ್ಮೀರ ಸಮಸ್ಯೆ ಬಗೆಹರಿಸಲು ಸಹಾಯ ಮಾಡಲು ಸಿದ್ಧ ಎಂದು ಹೇಳಿದರು.
ಕಾಶ್ಮೀರದ ಬಗ್ಗೆ ಉಭಯ ರಾಷ್ಟ್ರಗಳ ನಡುವೆ ಮಧ್ಯಸ್ಥಿಕೆ ವಹಿಸಲು ಟ್ರಂಪ್ ಮುಂದಾಗಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ಕಾಶ್ಮೀರ ವಿಚಾರವಾಗಿ ಮಧ್ಯಸ್ಥಿಕೆ ವಹಿಸುವುದಾಗಿ ಟ್ರಂಪ್ ಹೇಳಿದ್ದರು. ಆದರೆ, ಕಾಶ್ಮೀರ ದ್ವಿಪಕ್ಷೀಯ ವಿಷಯವಾಗಿದ್ದು, ಮೂರನೇ ವ್ಯಕ್ತಿಗೆ ಇದರಲ್ಲಿ ಯಾವುದೇ ಪಾತ್ರವಿಲ್ಲ ಎಂದು ಭಾರತ ಬಹಳ ಹಿಂದಿನಿಂದಲೂ ಸಮರ್ಥಿಸಿಕೊಂಡಿದೆ. ಅಲ್ಲದೆ, ಪಾಕಿಸ್ತಾನ ಭಯೋತ್ಪಾದನಾ ಚಟುವಟಿಕೆಗಳಿಗೆ ಕಡಿವಾಣ ಹಾಕದೆ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಗೆ ಪ್ರಯತ್ನಿಸಿದೆ ಎನ್ನಲಾಗಿದೆ.