ಸಂತ್ರಸ್ತರಿಗೆ ಹೆಚ್ಚಿನ ನೆರವು ಒದಗಿಸಲು ಸರ್ಕಾರ ಸಿದ್ಧ-ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು, ಸೆ.14-ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆಯವರು, ನೆರೆ ಪೀಡಿತ ಪ್ರದೇಶಗಳಲ್ಲಿ ಸಂತ್ರಸ್ತರು ಮನೆ, ಮಠ, ಆಸ್ತಿಪಾಸ್ತಿ ಎಲ್ಲವನ್ನೂ ಕಳೆದುಕೊಂಡು ನಿರ್ವಸತಿಗರಾಗಿದ್ದಾರೆ.ಅವರಿಗೆ ಅಗತ್ಯವಿದ್ದಲ್ಲಿ ಹೆಚ್ಚಿನ ಪರಿಹಾರ ನೀಡಲು ಸರ್ಕಾರ ಬದ್ಧವಿದೆ ಎಂದು ತಿಳಿಸಿದರು.

ಸಂತ್ರಸ್ತರಲ್ಲಿ ಮನೆ ಕಳೆದುಕೊಂಡವರಿಗೆ ಮೊದಲು ಮನೆ ನಿರ್ಮಾಣಕ್ಕೆ ತಳಪಾಯ ಹಾಕಲು ಒಂದು ಲಕ್ಷ ಹಣ ಬಿಡುಗಡೆ ಮಾಡಲಾಗುವುದು. ಮನೆ ನಿರ್ಮಿಸಿದವರಿಗೆ ಐದು ಲಕ್ಷ ಕೊಡಲಾಗುವುದು. ಸಂತ್ರಸ್ತರಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿಕೊಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿಗಳು ಹೇಳಿರುವುದಾಗಿ ಹೇಳಿದರು.

ಮುಖ್ಯಮಂತ್ರಿಗಳೊಂದಿಗೆ ನಡೆಸಿರುವ ಸಭೆ ಅತ್ಯಂತ ಫಲಪ್ರದವಾಗಿದೆ.ಜಿಲ್ಲೆಯಲ್ಲಿ ಆಗಬೇಕಾದ ಪರಿಹಾರ ಕಾರ್ಯ ಮತ್ತು ಅಭಿವೃದ್ಧಿಗಳ ಕುರಿತಂತೆ ಮಾಹಿತಿ ಪಡೆದಿದ್ದಾರೆ.ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರದಿಂದ ಸೂಕ್ತವಾದ ಪರಿಹಾರ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಗಳ ವರದಿಯ ಮೇರೆಗೆ ಪರಿಹಾರ ಬಿಡುಗಡೆಯಾಗಲಿದೆ.ಈಗಾಗಲೇ ಸಂತ್ರಸ್ತರಿಗೆ ನೇರವಾಗಿ 10 ಸಾವಿರ ರೂ.ಪರಿಹಾರ ನೀಡುತ್ತಿದ್ದೇವೆ. ಸಂತ್ರಸ್ತರಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ನಮ್ಮ ನಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಉಂಟಾಗಿರುವ ನಷ್ಟದ ಮಾಹಿತಿಯನ್ನು ನೀಡಿದ್ದೇವೆ. ಸರ್ಕಾರದಿಂದ ಎಲ್ಲಾ ರೀತಿಯ ನೆರವು ಒದಗಿಸಿಕೊಡುವುದಾಗಿ ಸಿಎಂ ತಿಳಿಸಿದ್ದಾರೆ.ಕೇಂದ್ರದ ಪರಿಹಾರವೂ ಶೀಘ್ರವೇ ಬಿಡುಗಡೆಯಾಗಲಿದೆ ಎಂದು ಸಚಿವರು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ