ರಾಜ್ಯದಲ್ಲಿ ಮುಂಗಾರು ಚೇತರಿಕೆ

ಬೆಂಗಳೂರು,ಸೆ.18-ರಾಜ್ಯದಲ್ಲಿ ಮುಂಗಾರು ಚೇತರಿಕೆ ಕಂಡಿದ್ದು ಈ ತಿಂಗಳ ಅಂತ್ಯದವರೆಗೂ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ.

ಕಳೆದೆರಡು ದಿನಗಳಿಂದ ರಾಜ್ಯದ ಹಲವೆಡೆ ಉತ್ತಮ ಮಳೆಯಾಗಿದೆ. ನಿನ್ನೆ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಒಳ್ಳೆಯ ಮಳೆಯಾಗಿದೆ. ರಾಜ್ಯದಲ್ಲಿ ಮುಂಗಾರು ಚುರುಕ್ಕಾಗಿದ್ದು, ಇದಕ್ಕೆ ಪೂರಕವಾದ ವಾತಾವರಣ ಕೂಡ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವುದರಿಂದ ಸೆಪ್ಟೆಂಬರ್ ಅಂತ್ಯದವರೆಗೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದರು.

ಕಳೆದೆರಡು ವಾರಗಳಿಂದ ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿತ್ತು. ಮತ್ತೆ ಚೇತರಿಕೆ ಕಂಡಿದ್ದು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮೂರ್ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ. ತೀವ್ರವಾದ ಮಳೆ ಕೊರತೆಯಾಗಿದ್ದ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಚಿತ್ರದುರ್ಗ,ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗಲಿದೆ ಎಂದು ಅವರು ಹೇಳಿದರು.

ಎಂದಿನಂತೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಮುಂದುವರೆಯಲಿದೆ. ನಿನ್ನೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮವಾದ ಮಳೆ ಬಿದ್ದ ವರದಿಯಾಗಿದೆ ಎಂದರು.

ಸ್ಥಳೀಯ ಹವಾ ಮುನ್ಸೂಚನೆ ಪ್ರಕಾರ ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ