ಶಹಜಾನ್ಪುರ(ಉ.ಪ್ರ), ಸೆ.30-ಬಿಜೆಪಿ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದ ಅವರಿಂದ ಅತ್ಯಾಚಾರಕ್ಕೆ ಒಳಗಾದರೆನ್ನಲಾದ ಕಾನೂನು ವಿದ್ಯಾರ್ಥಿನಿಗೆ ಬೆಂಬಲ ಸೂಚಿಸಿ ಇಂದು ಕಾಂಗ್ರೆಸ್ ನಡೆಸಿದ ಸಾರ್ವಜನಿಕ ಸಭೆಯೊಂದರ ವೇಳೆ ಗಲಭೆ ಉಂಟಾಗಿ 80ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಘಟನೆಯಿಂದಾಗಿ ಶಹಜಾನ್ಪುರ್ ಕೆಲವೆಡೆ ಉದ್ವಿಗ್ನ ವಾತಾವರಣ ಉಂಟಾಗಿದ್ದು, ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಅತ್ಯಾಚಾರ ಸಂತ್ರಸ್ತೆ ಕಾನೂನು ವಿದ್ಯಾರ್ಥಿನಿಗೆ ಬೆಂಬಲ ಸೂಚಿಸಿ ಕಾಂಗ್ರೆಸ್ ಉತ್ತರಪ್ರದೇಶದಲ್ಲಿ ಬೃಹತ್ ರ್ಯಾಲಿ ಹಮ್ಮಿಕೊಂಡಿದ್ದು, ಇಂದು ಪೂರ್ವಭಾವಿಯಾಗಿ ಶಹಜಾನ್ಪುರ್ನಲ್ಲಿ ಕಾಂಗ್ರೆಸ್ ಸಭೆಯೊಂದು ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಕೆಲ ಉದ್ರಿಕ್ತ ಕಾರ್ಯಕರ್ತರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಪ್ರತಿಭಟನೆ ತೀವ್ರಗೊಳಿಸಲು ಯತ್ನಿಸಿದರು. ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ತಪ್ಪಿಸಲು ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ 80 ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದರು.
ಈ ಸಂದರ್ಭದಲ್ಲಿ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ವಾದ-ವಾಗ್ವಾದ ನಡೆದು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಕಾಂಗ್ರೆಸ್ ಕಾರ್ಯಕರ್ತರ ಬಂಧನದ ಕ್ರಮವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಖಂಡಿಸಿದ್ದಾರೆ. ಇದು ಉತ್ತರ ಪ್ರದೇಶ ಸರ್ಕಾರದ ದುಂಡಾವರ್ತಿ ಕ್ರಮ ಅನ್ಯಾಯದ ವಿರುದ್ಧ ಪ್ರತಿಭಟಿಸಲು ಮುಂದಾದವರನ್ನು ಬಂಧಿಸಲು ಕಾನೂನಿನ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.