ಬೆಂಗಳೂರು, ಸೆ.30- ರಾಜ್ಯ ಸರ್ಕಾರ ಅನುದಾನ ವಾಪಸ್ ಪಡೆದಿರುವುದನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ನಾಳೆ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಸಲಿದೆ.
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಎಂಇ ಗ್ರೌಂಡ್ನಿಂದ ನಾಳೆ ಬೆಳಗ್ಗೆ 10 ಗಂಟೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದ್ದು , ಜಾಲಹಳ್ಳಿ ವೃತ್ತದವರೆಗೆ ನಡೆಸಲಾಗುತ್ತದೆ ಎಂದು ಶಾಸಕ ಆರ್. ಮಂಜುನಾಥ್ ತಿಳಿಸಿದರು.
ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ 675 ರಿಂದ 700 ಕೋಟಿ ರೂ.ನಷ್ಟು ಅನುದಾವನ್ನು ನೀಡಲಾಗಿತ್ತು. ಬಿಜೆಪಿ ಸರ್ಕಾರ ಬಂದ ಮೇಲೆ ಅನುದಾನವನ್ನು ಕಡಿತ ಮಾಡಿ ಕೇವಲ 25 ಕೋಟಿ ರೂ. ಮಾತ್ರ ನೀಡಲಾಗಿದೆ. ಕ್ಷೇತ್ರಕ್ಕೆ ಆಗುತ್ತಿರುವ ಅನ್ಯಾಯವನ್ನು ವಿರೋಧಿಸಿ ರಾಜ್ಯ ಸರ್ಕಾರದ ಕಣ್ಣು ತೆರೆಸಲು ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಹೇಳಿದರು.
ಹೊಸದಾಗಿ ಬಿಬಿಎಂಪಿಗೆ ಸೇರಿದ ನಮ್ಮ ಕ್ಷೇತ್ರದಲ್ಲಿ ಕೆರೆಗಳು ಅಭಿವೃದ್ಧಿಯಾಗಿಲ್ಲ , ಉದ್ಯಾನವನಗಳಿಲ್ಲ, ಕುಡಿಯುವ ನೀರಿನ ಮಾರ್ಗ, ಒಳಚರಂಡಿ ಮಾರ್ಗಗಳು ನಿರ್ಮಾಣವಾಗಬೇಕಿದೆ. ಮೂಲ ಸೌಲಭ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನದ ಅಗತ್ಯವಿದೆ. ಆzರೆ ಕಳೆದ ಸರ್ಕಾರ ನೀಡಿದ ಅನುದಾನವನ್ನು ಈ ಸರ್ಕಾರ ವಾಪಸ್ ಪಡೆದಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರದ ಕಣ್ಣು ತೆರೆಸಲು ಶಾಂತಿಯುತ ಪ್ರತಿಭಟನೆ ಮಾಡಲು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ, ಶಾಸಕರಾದ ಕೆ.ಎಂ. ಶಿವಲಿಂಗೇಗೌಡ, ವೀರಭದ್ರಯ್ಯ ಸೇರಿದಂತೆ ಪಕ್ಷದ ಹಲವು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.