ಬೆಂಗಳೂರು, ಅ.2-ನಮ್ಮ ಪಕ್ಷದ ಶಾಸಕರಾದ ಎಂ.ಸಿ.ಮನಗೂಳಿ ಹಾಗೂ ದೇವಾನಂದ ಚೌವ್ಹಾಣ್ ಅವರು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದರು.
ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿಂದು ರಾಷ್ಟ್ರಪಿತ ಮಹಾತ್ಮಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಅಂಗವಾಗಿ ಗಾಂಧಿ ಮತ್ತು ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿದ ನಂತರ ಮಾತನಾಡಿದ ಅವರು, ಆ ಇಬ್ಬರು ಶಾಸಕರು ಶಾಸಕರು ತಮ್ಮ ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರಬಹುದು. ಅದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ.ಆ ಇಬ್ಬರೂ ಶಾಸಕರು ಪಕ್ಷಕ್ಕೆ ನಿಷ್ಠರಾಗಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮಾತನಾಡಿ, ಬಿಹಾರದ ಪ್ರವಾಹದ ವಿಚಾರವಾಗಿ ಅಲ್ಲಿನ ಮುಖ್ಯಮಂತ್ರಿ ನಿತೀಶ್ಕುಮಾರ್ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರು ಮಾತುಕತೆ ನಡೆಸಿರುವ ಬಗ್ಗೆ ಪ್ರತಿಕ್ರಿಯಿಸಿದ ಗೌಡರು, ಬಿಹಾರದಲ್ಲಿ ಮೈತ್ರಿ ಸರ್ಕಾರವಿದ್ದು, ಮುಂದಿನ ಬಾರಿ ಬಹುಮತ ಪಡೆಯಬಹುದು. ಆ ಕಾರಣಕ್ಕೆ ಟ್ವೀಟ್ ಮಾಡಿದ್ದಾರೆ.ಆ ಟ್ವೀಟ್ ಗಮನಿಸಿದ್ದೇವೆ. ಮಹಾರಾಷ್ಟ್ರ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವೇ ಇದೆ.ಗಾಂಧಿ ಜಯಂತಿಯಂದು ಇದಕ್ಕಿಂತ ಹೆಚ್ಚು ಹೇಳುವುದು ಬೇಡ ಎಂದು ಹೇಳಿದರು.
ಇದಕ್ಕೂ ಮುನ್ನ ಗಾಂಧಿ ಜಯಂತಿ ಹಾಗೂ ಲಾಲ್ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಸರ್ವಧರ್ಮ ಪ್ರಾರ್ಥನೆ ಮಾಡಲಾಯಿತು.
ಜೆಡಿಎಸ್ ರಾಜ್ಯಕಾರ್ಯಾಧ್ಯಕ್ಷ ನಾರಾಯಣರಾವ್, ಮಹಿಳಾ ಘಟಕದ ಅಧ್ಯಕ್ಷ ಲೀಲಾದೇವಿ ಆರ್.ಪ್ರಸಾದ್, ಬೆಂಗಳೂರು ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಮತ್ತಿತರರು ಪಾಲ್ಗೊಂಡಿದ್ದರು.