
ಬೆಂಗಳೂರು,ಅ.3-ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಕೂಡಲೇ ಪರಿಹಾರವನ್ನು ಬಿಡುಗಡೆ ಮಾಡಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಮೊದಲು ಪ್ರಧಾನಿ ಬಗ್ಗೆ ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಪ್ರಧಾನಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಪ್ರವಾಹ ಪೀಡಿತ ಯಾವುದೇ ರಾಜ್ಯಗಳಿಗೂ ಕೇಂದ್ರ ಸರ್ಕಾರ ಹಣವನ್ನು ಬಿಡುಗಡೆ ಮಾಡಿಲ್ಲ. ಇದು ಕರ್ನಾಟಕಕ್ಕೂ ಅನ್ವಯವಾಗುತ್ತದೆ. ಪ್ರಧಾನಿಗಳ ಬಗ್ಗೆ ಅಪಪ್ರಚಾರ ಮಾಡುವುದನ್ನು ನಿಲ್ಲಿಸಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಕೇಂದ್ರದಿಂದ ಎಷ್ಟು ಪರಿಹಾರ ತಂದಿದ್ದರು ಎಂಬುದು ನನಗೂ ಗೊತ್ತು.ಪ್ರವಾಹ ಉಂಟಾದಾಗ ಎಲ್ಲವನ್ನು ತಂದು ಸುರಿದಿದ್ದೇವೆ ಎನ್ನುವ ಮಟ್ಟಿಗೆ ಮಾತನಾಡುತ್ತಿದ್ದಾರೆ. ಪ್ರಧಾನಿಗೆ ಕರ್ನಾಟಕದ ಪರಿಸ್ಥಿತಿಯ ಅರಿವಿದೆ ಎಂದು ಹೇಳಿದರು.
ಪರಿಹಾರ ಬಿಡುಗಡೆ ಮಾಡುವಂತೆ ಪ್ರಧಾನಿ ಬಳಿ ಸರ್ವಪಕ್ಷ ನಿಯೋಗವನ್ನು ಕರೆದೊಯ್ಯುವ ಅಗತ್ಯವಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಬಂದು ಹೋಗಿದ್ದರಿಂದ ಪರಿಸ್ಥಿತಿ ಅವರಿಗೂ ಗೊತ್ತಿದೆ. ಸದ್ಯದಲ್ಲೇ ಹಣ ಬಿಡುಗಡೆಯಾಗುವುದರಿಂದ ಸರ್ವಪಕ್ಷ ನಿಯೋಗವನ್ನು ಕರೆದೊಯ್ಯುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು ಯಾವುದೇ ರೀತಿಯ ಸಮಸ್ಯೆ ಎದುರಾಗಿಲ್ಲ. ಕೇಂದ್ರದ ಅನುದಾನವನ್ನು ಕಾಯದೆ ರಾಜ್ಯ ಸರ್ಕಾರ ಈಗಾಗಲೇ ಮೂರು ಸಾವಿರ ಕೋಟಿ ಹಣವನ್ನು ಬಿಡುಗಡೆ ಮಾಡಿದೆ.
ಮನೆ ಕುಸಿತಕ್ಕೆ 5 ಲಕ್ಷ ಪರಿಹಾರ ಸರ್ಕಾರದ ಹಂತದಲ್ಲಿನೀಡುತ್ತಿದ್ದೇವೆ. ಪ್ರಾರಂಭಿಕವಾಗಿ ಒಂದು ಲಕ್ಷ ರೂ.ಗಳನ್ನು ನೀಡಲಾಗುತ್ತಿದೆ. ಮನೆ ರಿಪೇರಿಗೆ ಒಂದು ಲಕ್ಷ ಪರಿಹಾರ ಘೋಷಿಸಿದ್ದವು.ಇದರಿಂದ 25 ಸಾವಿರ, 50 ಸಾವಿರ ಹಣವನ್ನು ಬಿಡುಗಡೆ ಮಾಡಲಾಗಿದೆ.
ಕೆಲವು ಕಡೆ ತಾಂತ್ರಿಕ ಕಾರಣಗಳಿಂದ ಬಿಡುಗಡೆಯಾಗಿಲ್ಲ. ಎಲ್ಲೆಲ್ಲಿ ಸಮಸ್ಯೆ ಇದೆಯೋ ಅಂತಹ ಕಡೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಪರಿಹಾರ ಕಾರ್ಯದಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂದು ಬಿಎಸ್‍ವೈ ಸ್ಪಷ್ಟಪಡಿಸಿದರು.
ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ನಾನೇ ಇಂದಿನಿಂದ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ. ಎಲ್ಲೆಲ್ಲಿ ಸಮಸ್ಯೆ ಇದೆಯೋ ಅಂತಹ ಕಡೆ ಪರಿಹಾರ ಒದಗಿಸಲು ಆದ್ಯತೆ ನೀಡಲಾಗುವುದು.ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡದಿದ್ದರೂ ಪರಿಹಾರ ಕಾರ್ಯ ಸಮರ್ಪಕವಾಗಿ ಮುಂದುವರೆಯುತ್ತಿದೆ. ಪ್ರತಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ ಎಂದರು.
ಪಕ್ಷದ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಇಂದು ಭೇಟಿಯಾಗಿದ್ದಾರೆ.ಪಕ್ಷದ ಇತ್ತೀಚಿನ ಬೆಳವಣಿಗೆಗಳ ಕುರಿತಂತೆ ಚರ್ಚೆ ಮಾಡಲಾಗಿದೆ.ಪಕ್ಷದ ಸಂಘಟನೆ ಹಾಗೂ ಇತ್ತೀಚಿನ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು.
ನೀವು ತೆಗೆದು ಹಾಕಿದ ಪದಾಧಿಕಾರಿಗಳನ್ನು ಪುನಃ ನೇಮಕ ಮಾಡಿಕೊಂಡಿದ್ದಾರಲ್ಲ?ಎಂಬ ಮಾಧ್ಯಮದವರ ಪ್ರಶ್ನೆಗೆ, ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ.ಇಲ್ಲಿ ನನ್ನ ಕಡೆಯವರು, ಅವರ ಕಡೆಯವರು ಎಂಬ ಪ್ರಶ್ನೆ ಉದ್ಭವಿಸುವುದಿಲ್ಲ. ಎಲ್ಲರೂ ಒಟ್ಟಾಗಿ ಪಕ್ಷವನ್ನು ಸಂಘಟಿಸುತ್ತೇವೆ. ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಯಾವಯಾವ ಕಾರ್ಯತಂತ್ರಗಳನ್ನು ಮಾಡಬೇಕು ಎಂಬುದರ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು.