ಪದವೀಧರ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ-ಸಚಿವ ಎಸ್.ಸುರೇಶ್‍ಕುಮಾರ್

ಬೆಂಗಳೂರು,ಅ.4-ಪದವೀಧರ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಭರವಸೆ ನೀಡಿದರು.

ಕರ್ನಾಟಕ ರಾಜ್ಯಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘ, ನಗರದ ಮಹಾರಾಣಿ ವಿಜ್ಞಾನ ಪದವಿ ಕಾಲೇಜಿನಲ್ಲಿಂದು ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ  ಹೊಸ ವೃಂದ ಹಾಗೂ ವೃಂದಬಲ ನಿಗದಿ, ವೃಂದ ಮತ್ತು ನೇಮಕಾತಿ ನಿಯಮಗಳು-2017 ಇದರ ಸಾಧಕ-ಬಾಧಕಗಳ ಬಗ್ಗೆ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಪದವೀಧರ ಶಿಕ್ಷಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು.ಶಿಕ್ಷಕರ ಸಂಘದ ಪದಾಧಿಕಾರಿಗಳೊಂದಿಗೆ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯವಿಧಾನಮಂಡಲದ ಅಧಿವೇಶನ ಮುಗಿದ ಬಳಿಕ ಸಭೆ ನಡೆಸಲಾಗುವುದು ಎಂದು ಹೇಳಿದರು.

ಮಾಜಿ ಸಚಿವ ಬಸವರಾಜ್ ಹೊರಟ್ಟಿ ಮಾತನಾಡಿ, ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ತಮ್ಮ ಬೆಂಬಲವಿದೆ.ನೇಮಕಾತಿ ನಿಯಮಗಳಲ್ಲಿ ಬದಲಾವಣೆಯಾಗಬೇಕಾಗಿದೆ ಎಂದರು.

ರಾಜ್ಯದ ಎಲ್ಲಾ ಹಿರಿಯ ಪ್ರಾಥಮಿಕ  ಶಾಲೆಗಳಲ್ಲಿ 8ನೇ ತರಗತಿ  ಪ್ರಾರಂಭಿಸಬೇಕು, ಪದವೀಧರ ಶಿಕ್ಷಕರ ಸೇವಾ ಜ್ಯೇಷ್ಠತೆ ಆಧರಿಸಿ 6-8ನೇ ತರಗತಿಗೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಮರು ಹೊಂದಾಣಿಕೆ ಮಾಡಬೇಕು.

ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತುರ್ತಾಗಿ ತಿದ್ದುಪಡಿ ಮಾಡಬೇಕು ಎಂಬ ಮನವಿಯನ್ನು ಇದೇ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಎಸ್.ವೈ.ಸೊರಟ್ಟಿ ಅವರು ಸಚಿವರಿಗೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಅಯನೂರು ಮಂಜುನಾಥ್, ಕೆ.ಪಿ.ಶ್ರೀಕಂಠೇಗೌಡ, ಅ.ದೇವೆಗೌಡ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ, ಪದವೀಧರ ಶಿಕ್ಷಕರ ಸಂಘದ  ಪ್ರಧಾನ ಕಾರ್ಯದರ್ಶಿ ಎಚ್.ಆರ್.ಶಶಿಕುಮಾರ್, ಸಂಘಟನಾ ಕಾರ್ಯದರ್ಶಿ ಡಿ.ನಟರಾಜ್ ಮತ್ತಿತರರು ಪಾಲ್ಗೊಂಡಿದ್ದರು.

 

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ