ಬೆಂಗಳೂರು, ಅ.9-ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಸತ್ಯವಾಗಿದ್ದರೆ ಚುನಾವಣೆಗೆ ಹೋಗುವುದು ಸೂಕ್ತ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಜೆ.ಪಿ.ಭವನದಲ್ಲಿಂದು ಜೆಡಿಎಸ್ ಶಾಸಕರು ಹಾಗೂ ಮುಖಂಡರ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರು ನೀಡಿರುವ ಹೇಳಿಕೆಯಲ್ಲಿ ವಾಸ್ತವಾಂಶವಿದ್ದರೆ ಈ ರೀತಿಯ ಸರ್ಕಾರ ನಡೆಸುವ ಬದಲು ಚುನಾವಣೆಗೆ ಹೋಗುವುದೇ ಒಳ್ಳೆಯದು ಎಂದರು.
ಮೈತ್ರಿ ಸರ್ಕಾರದ ಅವಧಿಯಲ್ಲಿ ಅಲ್ಪಸ್ವಲ್ಪ ಕೆಲಸವಾದರೂ ಆಗಿತ್ತು.ಯತ್ನಾಳ್ ಅವರ ಹೇಳಿಕೆ ನೋಡಿದರೆ ಎಂತಹ ಸಂಕಷ್ಟದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸರ್ಕಾರವನ್ನು ನಡೆಸುತ್ತಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಯಡಿಯೂರಪ್ಪ ಅವರ ಹೆಸರು ಪ್ರಸ್ತಾಪಿಸದೆ ಹೇಳಿದರು.
ನಾಳೆ ಪಾದಯಾತ್ರೆ:
ನೆರೆ ಪರಿಹಾರ ಕೈಗೊಳ್ಳುವುದು ಸೇರಿದಂತೆ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ನಾಳೆ ಪಾದಯಾತ್ರೆ ನಡೆಸಲಾಗುವುದು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು.
ಜೆಡಿಎಸ್ ಮುಖಂಡರ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ವರು, ಮಾಜಿ ಶಾಸಕರು, ಮಾಜಿ ಸಚಿವರು ಸೇರಿದಂತೆ ಪಕ್ಷದ ಮುಖಂಡರು ಪಾಲ್ಗೊಳ್ಳಲಿದ್ದಾರೆ.
ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕರು ಹೋರಾಟ ನಡೆಸುತ್ತಾರೆ. ಬಿಜೆಪಿ ಸರ್ಕಾರದ ನಡವಳಿಕೆ ಜನರಿಗೆ ಬೇಸರ ತಂದಿದೆ.ರಾಜ್ಯದಲ್ಲಿ ಭೀಕರ ಪ್ರವಾಹ ಉಂಟಾಗಿದ್ದರೂ, ಪರಿಹಾರ ಕಾರ್ಯ ಸಮರ್ಪಕವಾಗಿ ಕೈಗೊಂಡಿಲ್ಲ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಜನಪ್ರಿಯ ಕಾರ್ಯಕ್ರ್ರಮಗಳ ಅನುಷ್ಠಾನ ಸರಿಯಾಗಿ ಆಗುತ್ತಿಲ್ಲ. ಈ ಎಲ್ಲಾ ವಿಚಾರಗಳ ಪ್ರತಿಭಟನಾ ಪಾದಯಾತ್ರೆ ನಡೆಸಲಾಗುವುದು ಎಂದು ಗೌಡರು ತಿಳಿಸಿದರು.