
ಬೆಂಗಳೂರು: ಖ್ಯಾತ ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ (70) ವಯೋಸಹಜ ಅನಾರೋಗ್ಯದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕದ್ರಿಯವರು ಮಂಗಳೂರು ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್‌ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.
ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು , ಅದಕ್ಕೆ ಭಾರತೀಯ ಸಂಗೀತವನ್ನು ಕರಗತ ಮಾಡಿಸಿದವರಲ್ಲಿ ಕದ್ರಿ ಗೋಪಾಲನಾಥರು ಪ್ರಮುಖರು. ಬಾಲ್ಯದಿಂದಲೂ ಸಂಗೀತದಲ್ಲಿ ಒಲವು ಬೆಳೆಸಿಕೊಂಡ ಅವರಿಗೆ ತಂದೆಯೇ ಗುರುವಾಗಿದ್ದರು.
ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ತಮಿಳುನಾಡು ಸರಕಾರದ ಕಲೈಮಾಮಣಿ, ಕರ್ನಾಟಕ ಕಲಾಶ್ರೀ, ಗಾನಕಲಾ ಭೂಷಣ, ನಾದ ಗಂಧರ್ವ, ನಾದೋಪಾಸನ ಬ್ರಹ್ಮ ಸುನಾದ, ನಾದಕಲಾ ರತ್ನ, ನಾದಕಲಾನಿಧಿ, ಸಂಗೀತ ವಿದ್ಯಾರತ್ನ, ಸಂಗೀತ ರತ್ನ, ಶೃಂಗೇರಿ – ಮಂತ್ರಾಲಯ – ಅಹೋಬಿಲ ಮುಂತಾದ ಪೀಠಗಳಿಂದ ಸನ್ಮಾನ, ಕಂಚಿ ಕಾಮಕೋಠಿ ಆಸ್ಥಾನ ವಿದ್ವಾನ್, ಬೆಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಮುಂತಾದ ಅನೇಕ ಪ್ರಶಸ್ತಿ ಗೌರವಗಳು ಕದ್ರಿ ಗೋಪಾಲನಾಥರನ್ನು ಅರಸಿಬಂದಿವೆ.
ಪತ್ನಿ ಮತ್ತು ಪುತ್ರ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮಂಗಳೂರು ಪದವಿನಂಗಡಿ ಮನೆಯಲ್ಲಿ ಇಂದು ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ.