ಬೆಂಗಳೂರು, ಅ.14- ವೇತನ ಪರಿಷ್ಕರಣೆ ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲಿರುವ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್ಎಎಲ್)ನ 20 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.
ಇದರಿಂದಾಗಿ ಪ್ರಮುಖವಾಗಿ ಬೆಂಗಳೂರು, ನಾಸಿಕ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿರುವ ಹೆಚ್ಎಎಲ್ ಕಾರ್ಖಾನೆಗಳಲ್ಲಿ ಕೆಲಸ ಸ್ಥಗಿತಗೊಂಡಿದೆ.
ಅಖಿಲ ಭಾರತ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಕಾರ್ಮಿಕರ ಒಕ್ಕೂಟದ ಸಮನ್ವಯ ಸಮಿತಿ ಕರೆ ಮೇರೆಗೆ ಇಂದಿನಿಂದ ಮುಷ್ಕರ ಆರಂಭವಾಗಿದೆ. ಆಡಳಿತ ಮಂಡಳಿ ಜತೆ ನಿನ್ನೆ ನಡೆದ ಸಂಧಾನ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಇಂದಿನಿಂದ ನಾವು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದು ಅನಿವಾರ್ಯವಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನಿಂದ ಇಂದು ಬೆಳಗ್ಗೆಯಿಂದಲೇ ಹೆಚ್ಎಎಲ್ ನೌಕರರು ಮುಷ್ಕರ ನಡೆಸಿದ್ದು, ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿವೆ.