ಬೆಂಗಳೂರು,ಅ.16- ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನು ಮೂರ್ನಾಲ್ಕು ದಿನಗಳ ಕಾಲ ಸಾಧಾರಣ ಪ್ರಮಾಣದ ಮಳೆ ಮುಂದುವರೆಯಲಿದೆ.
ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದ ಮೋಡ ಕವಿದ ವಾತಾವರಣ ಕಂಡುಬಂದಿದ್ದು ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಶ್ರೀನಿವಾಸ್ ರೆಡ್ಡಿ ತಿಳಿಸಿದರು.
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕೇರಳದಲ್ಲಿ ಹೆಚ್ಚಿನ ಮಳೆಯಾಗಲಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ವಲಯಗಳಲ್ಲಿ ಮೂರ್ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆ ಇದೆ.
ಮೋಡ ಕವಿದ ವಾತಾವರಣ ಕಂಡುಬಂದಿರುವುದರಿಂದ ತಾಪಮಾನದಲ್ಲಿ ಇಳಿಕೆಯಾಗಲಿದೆ. ನೈರುತ್ಯ ಮುಂಗಾರು ಮರಳುವ ಹಾಗೂ ಈಶಾನ್ಯ ಹಿಂಗಾರು ಪ್ರಾರಂಭವಾಗುವ ಪರ್ವ ಕಾಲ ಇದಾಗಿದ್ದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರೆಯಲಿದೆ. ಒಂದೆರಡು ಕಡೆ ಭಾರೀ ಮಳೆಯಾಗಬಹುದು. ಆದರೆ ಮಧ್ಯಮ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ ಎಂದರು.
ಬೆಂಗಳೂರು ಹಾಗೂ ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ್ಗೆ ತುಂತುರು ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿ ಕಂಡುಬರಲಿದೆ ಎಂದು ಹೇಳಿದರು.