ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್‍ಗೆ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಅವಕಾಶ-ವಿರೋದ ಪಕ್ಷ ನಾಯಕ ಸಿದ್ದರಾಮಯ್ಯ

ನವದೆಹಲಿ, ಅ.16-ವಿಧಾನಸಭೆ ಉಪಚುನಾವಣೆಯಲ್ಲಿ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇ ಆದರೆ, ಹೆಚ್ಚು ಸ್ಥಾನಗಳನ್ನು ಗೆದ್ದು, ಮತ್ತೆ ಕಾಂಗ್ರೆಸ್ ಸರ್ಕಾರವನ್ನು ಅಸ್ತಿತ್ವಕ್ಕೆ ತರುವ ಸಾಧ್ಯತೆಗಳಿವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೈಕಮಾಂಡ್‍ಗೆ ವಿವರಿಸಿದ್ದಾರೆ.
ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಅವರು, ಹೈಕಮಾಂಡ್ ನಾಯಕರಾದ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ಅಹಮ್ಮದ್ ಪಟೇಲ್, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಲವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ರಾಜ್ಯದಲ್ಲಿನ ರಾಜಕೀಯ ಪರಿಸ್ಥಿತಿ ಬಗ್ಗೆ ಸಂಪೂರ್ಣ ಅಧ್ಯಯನ ವರದಿಯೊಂದಿಗೆ ತೆರಳಿರುವ ಸಿದ್ದರಾಮಯ್ಯ ಅವರು, ಉಪಚುನಾವಣೆಯಲ್ಲಿ ತಾವು ಸೂಚಿಸುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿರುವುದಾಗಿ ತಿಳಿದುಬಂದಿದೆ.

ಉಪಚುನಾವಣೆಗಳಲ್ಲಿ ಕಾಂಗ್ರೆಸ್‍ಗೆ ಅನುಕೂಲಕರವಾದ ವಾತಾವರಣವಿದೆ. ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಸರಿಯಾಗಿ ನಿರ್ಣಯ ಕೈಗೊಂಡಿದ್ದೇ ಆದರೆ 15 ಕ್ಷೇತ್ರಗಳ ಪೈಕಿ 13ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕೆ ಆಡಳಿತ ವಿರೋಧಿ ಅಲೆ ಇದೆ. ಇದರಿಂದಾಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್‍ಗೆ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಅವಕಾಶ ಇದೆ. ನಿರೀಕ್ಷೆಯಂತೆ ಕಾಂಗ್ರೆಸ್-ಜೆಡಿಎಸ್ ಹೆಚ್ಚು ಸ್ಥಾನ ಗಳಿಸಿದರೆ ಬಿಜೆಪಿ ಸರ್ಕಾರ ಅಲ್ಪಮತಕ್ಕೆ ಕುಸಿಯಲಿದೆ.
ಆ ಸಂದರ್ಭದಲ್ಲಿ ಜೆಡಿಎಸ್-ಕಾಂಗ್ರೆಸ್ ಮತ್ತೆ ಕೈಜೋಡಿಸಿದರೆ ಎರಡನೇ ಬಾರಿಗೆ ಸಮ್ಮಿಶ್ರ ಸರ್ಕಾರ ರಚಿಸುವ ಅವಕಾಶ ಇದೆ. ಒಂದು ವೇಳೆ ಜೆಡಿಎಸ್ ಬಿಜೆಪಿ ಜೊತೆ ಕೈಜೋಡಿಸಿದ್ದೇ ಆದರೆ ನಾವು ಯಥಾ ರೀತಿ ವಿರೋಧ ಪಕ್ಷದ ಸ್ಥಾನದಲ್ಲಿ ಮುಂದುವರೆಯಬಹುದು.

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿರುವುದು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರಿಗೆ ಇಷ್ಟವಿದ್ದಂತಿಲ್ಲ. ನೆರೆ ಸಂತ್ರಸ್ತರಿಗೆ ಅನುದಾನ ನೀಡುವುದು ಸೇರಿದಂತೆ ಯಾವುದೇ ವಿಷಯದಲ್ಲೂ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ. ಇದರಿಂದ ಜನ ಬೇಸತ್ತಿದ್ದಾರೆ. ಮತ್ತೆ ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರವೇ ಸೂಕ್ತ ಎಂಬ ಚರ್ಚೆಗಳು ನಡೆಯುತ್ತಿವೆ.
ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿದ್ದೇ ಆದರೆ ಹೆಚ್ಚು ಸ್ಥಾನ ಗೆಲ್ಲಬಹುದು. ಮತ್ತೆ ಸರ್ಕಾರವನ್ನು ರಚಿಸಬಹುದು ಎಂಬ ಸಾಧ್ಯತೆಗಳನ್ನು ಸಿದ್ದರಾಮಯ್ಯ ಹೈಕಮಾಂಡ್ ಮುಂದಿಟ್ಟಿದ್ದಾರೆ.

ಸಿದ್ದು ಲೆಕ್ಕಾಚಾರ:
ಒಂದು ವೇಳೆ ಎಲ್ಲವೂ ಲೆಕ್ಕಾಚಾರದಂತೆ ನಡೆದರೆ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ. ಈ ಹಿಂದೆ ಜೆಡಿಎಸ್‍ಗೆ ಕಾಂಗ್ರೆಸ್ ಬೇಷರತ್ ಬೆಂಬಲ ನೀಡಿತ್ತು. ಕುಮಾರಸ್ವಾಮಿಯವರ ಅಸಹಕಾರ ಮತ್ತು ಬೇಜವಾಬ್ದಾರಿತನದಿಂದಾಗಿ ಸಮ್ಮಿಶ್ರ ಸರ್ಕಾರ ಪತನವಾಯಿತು.
ಆ ಸಂದರ್ಭದಲ್ಲಿ ಕಾಂಗ್ರೆಸ್‍ನ ನಾಯಕತ್ವ ವಹಿಸಿಕೊಳ್ಳಲು ಉಪಮುಖ್ಯಮಂತ್ರಿಯಾಗಿದ್ದ ಪರಮೇಶ್ವರ್, ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಅವರುಗಳು ಪ್ರಬಲ ಆಕಾಂಕ್ಷಿಗಳಾಗಿದ್ದರು. ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಬೇಡಿಕೆಗಳನ್ನು ಸಿದ್ದು ಆಪ್ತ ಬಣದ ಶಾಸಕರು ಮುಂದಿಟ್ಟಾಗ ಮೂಲ ಕಾಂಗ್ರೆಸ್ಸಿಗರಿಂದ ಪೈಪೆÇೀಟಿ ತೀವ್ರವಾಗಿ ಎದುರಾಗಿತ್ತು. ಇತ್ತೀಚೆಗೆ ಅದು ನಿರಾಯಾಸವಾಗಿ ದೂರವಾಗಿದೆ.

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಆದಾಯ ತೆರಿಗೆ ದಾಳಿಯಿಂದಾಗಿ ಪರಮೇಶ್ವರ್ ಜರ್ಝರಿತರಾಗಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಅವರಿಗೆ ಸ್ವಪಕ್ಷದಲ್ಲಿ ಪೈಪೆÇೀಟಿ ಇಲ್ಲದಂತಾಗಿದೆ.
ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದು, ಮತ್ತೆ ಮೈತ್ರಿ ಸರ್ಕಾರ ರಚಿಸುವ ಸಂದರ್ಭ ಬಂದಿದ್ದೇ ಆದರೆ ಜೆಡಿಎಸ್ ಬಹಳಷ್ಟು ಮಂದಿ ಶಾಸಕರು ತಮಗೆ ಬೆಂಬಲ ನೀಡಲಿದ್ದಾರೆ ಎಂಬ ವಿಶ್ವಾಸವನ್ನು ಸಿದ್ದರಾಮಯ್ಯ ಹೊಂದಿದ್ದಾರೆ. ಅನಿವಾರ್ಯ ಸಂದರ್ಭದಲ್ಲಿ ದೇವೇಗೌಡರ ಮನವೊಲಿಸುವ ವಿಶ್ವಾಸವೂ ಸಿದ್ದರಾಮಯ್ಯ ಅವರಿಗಿದೆ ಎನ್ನಲಾಗಿದೆ.
ಪ್ರತಿಸ್ಪರ್ಧಿಗಳು ಹೆಚ್ಚಿಲ್ಲದೆ ಇರುವುದರಿಂದ ನಿರಾಯಾಸವಾಗಿ ಮತ್ತೆ ಮುಖ್ಯಮಂತ್ರಿಯಾಗಬಹುದು ಎಂಬ ಲೆಕ್ಕಾಚಾರವನ್ನು ಸಿದ್ದರಾಮಯ್ಯ ಹೆಣೆದಿದ್ದಾರೆ. ಹೀಗಾಗಿ ಪಕ್ಷವನ್ನು ಸಂಪೂರ್ಣವಾಗಿ ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಹೈಕಮಾಂಡ್ ಮುಂದೆ ಹಲವಾರು ಪ್ರಸ್ತಾವಗಳನ್ನು ಮುಂದಿಟ್ಟಿದ್ದಾರೆ.
ಇಂದು ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ಸಿದ್ದರಾಮಯ್ಯ ಅವರು, ಉಪಚುನಾವಣೆಯ ಸಂಭಾವನೀಯ ಅಭ್ಯರ್ಥಿಗಳ ಪಟ್ಟಿ ಹಾಗೂ ಪ್ರಸ್ತುತ ರಾಜಕೀಯ ಸ್ಥಿತಿಗತಿ ಬಗ್ಗೆ ಸುದೀರ್ಘ ವಿವರಣೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ