ಬೆಂಗಳೂರು, ಅ.18-ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಇಂದು ಮಹತ್ವದ ಸಭೆ ನಡೆಸಲಾಯಿತು.
ವಿಧಾನಪರಿಷತ್ ಸದಸ್ಯ ಚೌಡರೆಡ್ಡಿ ತೂಪಲ್ಲಿ ಹಾಗೂ ಜೆಡಿಎಸ್ ರಾಷ್ಟ್ರೀಯ ವಕ್ತಾರ ರಮೇಶ್‍ಬಾಬು ಮತ್ತಿತರರು ಆಕಾಂಕ್ಷಿಗಳಾಗಿದ್ದಾರೆ.
ಈ ಕ್ಷೇತ್ರಕ್ಕೆ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ವಿಧಾನಸಭೆ ಹಾಗೂ ವಿಧಾನಪರಿಷತ್ ಸದಸ್ಯರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು.
ವಿಧಾನಪರಿಷತ್ ಚುನಾವಣೆಯಲ್ಲಿ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಪಕ್ಷದ ಎಲ್ಲಾ ಮುಖಂಡರು, ನಾಯಕರು ಒಟ್ಟಾಗಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕೆಂದು ಗೌಡರು ಕಿವಿಮಾತು ಹೇಳಿದ್ದಾರೆ.
ಸಭೆಯಲ್ಲಿ ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ, ವಿಧಾನಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಮಾಜಿ ಸಚಿವ ಸತ್ಯನಾರಾಯಣ, ಬೆಂಗಳೂರು ನಗರ ಜೆಡಿಎಸ್ ಘಟಕದ ಅಧ್ಯಕ್ಷ ಆರ್.ಪ್ರಕಾಶ್, ಮಾಜಿ ಸಚಿವ ಶ್ರೀನಿವಾಸ್, ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಮತ್ತಿತರರು ಪಾಲ್ಗೊಂಡಿದ್ದರು.