![mahadayi-bhimgad-600x374](http://kannada.vartamitra.com/wp-content/uploads/2019/01/mahadayi-bhimgad-600x374-611x381.jpg)
ಬೆಂಗಳೂರು,ಅ.19-ಮಹಾದಾಯಿ ಕಳಸಾ – ಬಂಡೂರಿ ಯೋಜನೆಗೆ ಅಧಿಸೂಚನೆ ಹೊರಡಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಎಂ.ಸದಂ, ಉತ್ತರ ಕರ್ನಾಟಕದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ ಭಾಗದ ರೈತರು ಸತತ 4 ವರ್ಷಗಳ ನಿರಂತರ ಧರಣಿಯಿಂದ ಮಹಾದಾಯಿ ನ್ಯಾಯಧೀಕರಣ ರಾಜ್ಯದ ಪರ ತೀರ್ಪು ನೀಡಿದ್ದರೂ, ಸರ್ಕಾರ ಅಧಿಸೂಚನೆ ಹೊರಡಿಸಿಲ್ಲ. ಆದ್ದರಿಂದ ಶೀಘ್ರ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿದರು.
ಪ್ರಸ್ತುತ ಗೋವಾ, ಮಹಾರಾಷ್ಟ್ರ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದ್ದು, ಅಧಿಸೂಚನೆ ಹೊರಡಿಸಿ ಜನರಿಗೆ ಕುಡಿಯುವ ನೀರು ಒದಗಿಸಬೇಕು.ಈ ವಿಚಾರವನ್ನು ರಾಜಕೀಯವಾಗಿ ಬಳಸಿಕೊಂಡು ರೈತರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹುಬ್ಬಳ್ಳಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಈ ಭಾಗದ ರೈತರಿಗೆ ಕೂಡಲೇ ನೀರನ್ನು ಪೂರೈಸಲು ಎಲ್ಲಾ ಕ್ರಮಕೈಗೊಳ್ಳುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದರು. ಕೊಟ್ಟ ಮಾತನ್ನು ಕೇಂದ್ರ ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.