ಬೆಂಗಳೂರು,ಅ.21-ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ನಡೆಸಲಿದೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡು ಭಾರೀ ಹಿನ್ನಡೆ ಅನುಭವಿಸಿದ ಹಿನ್ನೆಲೆಯಲ್ಲಿ ನವೆಂಬರ್‍ನಲ್ಲಿ ನಡೆಯುವ 14 ನಗರಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಂಗ್ರೆಸ್‍ನೊಂದಿ ಮೈತ್ರಿ ಮಾಡಿಕೊಳ್ಳದಿರಲು ತೀರ್ಮಾನಿಸಿದೆ.
ಆದರೆ ಅನಿವಾರ್ಯ ಹಾಗೂ ಅಗತ್ಯವಿರುವ ಕಡೆ ಮಾತ್ರ ಸ್ನೇಹಮಯ ಹೋರಾಟ ಮಾಡುವ ಬಗ್ಗೆಯೂ ಗಂಭೀರ ಚಿಂತನೆ ನಡೆಸಲಾಗಿದೆ.ಮುಂಬರುವ ವಿಧಾನಸಭೆ ಉಪಚುನಾವಣೆಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಈಗಾಗಲೇ ಜೆಡಿಎಸ್ ವರಿಷ್ಠರು ಸ್ಪಷ್ಟಪಡಿಸಿದ್ದಾರೆ.
ಅದೇ ರೀತಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಚುನಾವಣಾಪೂರ್ವ ಹೊಂದಾಣಿಕೆ ಇಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷರಾದ ಎಚ್.ಕೆ.ಕುಮಾರಸ್ವಾಮಿ ನೇತೃತ್ವದಲ್ಲಿ ಈಗಾಗಲೇ ಜಿಲ್ಲಾವಾರು ಸಭೆ ನಡೆಸಿ ಸಂಘಟನೆ ಜೊತೆಗೆ ಚುನಾವಣಾ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿತ್ತು.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಆಯಾ ಜಿಲ್ಲಾ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಅಭ್ಯರ್ಥಿ ಆಯ್ಕೆಯನ್ನು ಮಾಡಲಾಗುತ್ತದೆ.
ಇತ್ತೀಚೆಗೆ ನಡೆದ ಕೆಲವು ನಗರಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಿತ್ತು.