
ಬೆಂಗಳೂರು, ಅ.22-ಪ್ರವಾಹಪೀಡಿತ ಪ್ರದೇಶಗಳಲ್ಲಿ ನಾಳೆಯಿಂದಲೇ ಬೀಡುಬಿಟ್ಟು ಪರಿಹಾರ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.
ಇಂದು ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ, ಉತ್ತರ ಕನ್ನಡ, ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹದ ಪರಿಸ್ಥಿತಿ ಎದುರಾಗಿದೆ.ಈಗಾಗಲೇ 11 ಜನ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.ಸಚಿವರು ಕೂಡಲೇ ಪ್ರವಾಹಪೀಡಿತ ಪ್ರದೇಶಗಳಿಗೆ ತೆರಳಿ ಅಗತ್ಯವಿರುವೆಡೆ ಕಾಳಜಿ ಕೇಂದ್ರಗಳನ್ನು ತೆರೆದು ಸಂತ್ರಸ್ತರಿಗೆ ನೆರವು ನೀಡಲು ಮುಂದಾಗಬೇಕು.ಪ್ರವಾಹದಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ತಿಳಿಸಲಾಗಿದೆ ಎಂದು ಹೇಳಿದರು.
ಪ್ರಸ್ತುತ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಬಗ್ಗೆ ಎರಡು-ಮೂರು ದಿನದಲ್ಲಿ ವರದಿ ಪಡೆದು ಮುಂದೆ ಕೈಗೊಳ್ಳಬೇಕಾಗಿರುವ ಪರಿಹಾರ ಕ್ರಮದ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮಾಧುಸ್ವಾಮಿ ತಿಳಿಸಿದರು.