ದಕ್ಷಿಣ ಕನ್ನಡದಲ್ಲಿ ಇನ್ನೆರಡು ದಿನ ಭಾರೀ ಮಳೆ; ಕರಾವಳಿಯಲ್ಲಿ ರೆಡ್ ಅಲರ್ಟ್​ ಘೋಷಣೆ

ಮಂಗಳೂರು : ರಾಜ್ಯಾದ್ಯಂತ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಭಾಗ, ಕೊಡಗು, ಮೈಸೂರು, ಬೆಂಗಳೂರು, ಉತ್ತರ ಕರ್ನಾಟಕ ಸೇರಿದಂತೆ ಹಲವಾರು ಕಡೆ ಮಳೆಯ ಅಬ್ಬರ ಜೋರಾಗಿದ್ದು, ಒಟ್ಟು 15 ಜಿಲ್ಲೆಗಳಲ್ಲಿ ನಿನ್ನೆ ಆರೆಂಜ್ ಅಲರ್ಟ್ಘೋಷಿಸಲಾಗಿತ್ತು.

ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಆರಂಭವಾಗಿದ್ದು, ಸಾಧಾರಣ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ಮಂಗಳೂರು ಭಾಗದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದ್ದು, ಕರಾವಳಿಯಲ್ಲಿ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಮಳೆಯ ಅಬ್ಬರ ಹೆಚ್ಚಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮಂಗಳೂರಿನ ಬಂಟ್ವಾಳ, ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕುಗಳು ಸೇರಿದಂತೆ ಉಡುಪಿ ಜಿಲ್ಲೆಯ ಕೆಲವು ಭಾಗದಲ್ಲೂ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಇಂದು ಮತ್ತು ನಾಳೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಮಳೆಯ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ