ಬೆಂಗಳೂರು,ನ.೩-ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಟಿಕೆಟ್ ಕೊಡಿ ಇಲ್ಲವೇ ನಾನು ಹೇಳಿದವರಿಗೆ ಟಿಕೆಟ್ ನೀಡಿ ಎಂದು ಅನರ್ಹ ಶಾಸಕ ಕೆ.ಗೋಪಾಲಯ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಒತ್ತಾಯಿಸಿದ್ದಾರೆ.
ಡಾರ್ಸ್ ಕಾಲೋನಿಯ ನಿವಾಸದಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ಉಪಚುನಾವಣೆ ಟಿಕೆಟ್ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.
ಸುಪ್ರೀಂಕೋರ್ಟ್ನಲ್ಲಿ ತೀರ್ಪು ಏನೇ ಬಂದರೂ ನಮ್ಮನ್ನು ಕೈ ಬಿಡಬಾರದು ಎಂದು ಗೋಪಾಲಯ್ಯ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ ಕ್ಷೇತ್ರದ ಬಿಜೆಪಿ ಮುಖಂಡರ ವರ್ತನೆ ಬಗ್ಗೆಯೂ ಅಸಮಾಧಾನವನ್ನು ವ್ಯಕ್ತಪಡಿಸಿ, ತಮ್ಮ ವಿರುದ್ದ ಸಂಚು ರೂಪಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಕ್ಷೇತ್ರದಲ್ಲಿ ಜನರಿಗೆ, ಮತದಾರರಿಗೆ ಹಾಗೂ ಕಾರ್ಯಕರ್ತರಿಗೆ ತಪ್ಪು ಸಂದೇಶ ರವಾನೆಯಾಗುವ ರೀತಿಯಲ್ಲಿ ಬಿಜೆಪಿ ಮುಖಂಡರು ವರ್ತಿಸುತ್ತಿದ್ದಾರೆ. ಈ ಬಗ್ಗೆ ಗಮನಹರಿಸಿ ಅವರಿಗೆ ತಿಳುವಳಿಕೆ ನೀಡಬೇಕು. ನನ್ನ ಬಗ್ಗೆ ತಪ್ಪು ಸಂದೇಶ ರವಾನೆಯಾಗುವುದನ್ನು ನಿಯಂತ್ರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಉಪಚುನಾವಣೆಯಲ್ಲಿ ಟಿಕೆಟ್ ನೀಡುವ ಬಗ್ಗೆ ಕ್ಷೇತ್ರದ ಬಿಜೆಪಿ ಮುಖಂಡರಲ್ಲೇ ಅಸಮಾಧಾನ ಇರುವ ಹಿನ್ನೆಲೆಯಲ್ಲಿ ಗೋಪಾಲಯ್ಯ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.