ಬೆಂಗಳೂರು,ನ.೩-ನಗರಸ್ಥಳೀಯ ಸಂಸ್ಥೆಗಳ ಚುನಾವಣೆಯ ಜವಾಬ್ದಾರಿಯನ್ನು ಜೆಡಿಎಸ್ ಆಯಾ ಜಿಲ್ಲೆಯ ಪದಾಧಿಕಾರಿಗಳು ಹಾಗೂ ಪಕ್ಷದ ಮುಖಂಡರಿಗೆ ನೀಡಿದೆ.
ಈಗಾಗಲೇ ೧೪ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಉಪಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದಿದ್ದು, ನಾಳೆಯಿಂದ ಪ್ರಚಾರದ ಭರಾಟೆ ಹೆಚ್ಚಾಗಲಿದೆ.
ಹೀಗಾಗಿ ಜೆಡಿಎಸ್ ವರಿಷ್ಠರು ಆಯಾ ಜಿಲ್ಲೆ ತಾಲ್ಲೂಕು ಮಟ್ಟದ ಪದಾಧಿಕಾರಿಗಳು, ಶಾಸಕರು, ಮಾಜಿ ಸಚಿವರು ಮತ್ತು ಪಕ್ಷದ ಮುಖಂಡರಿಗೆ ಚುನಾವಣೆ ಹೊಣೆಗಾರಿಕೆ ವಹಿಸಿದ್ದಾರೆ.
ಚುನಾವಣಾ ವೇಳಾ ಪಟ್ಟಿ ಪ್ರಕಟವಾಗುವ ಮುನ್ನವೇ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರು ಜಿಲ್ಲಾವಾರು ಪಕ್ಷದ ಮುಖಂಡರ ಸಭೆ ನಡೆಸಿ ಚುನಾವಣೆ ಸಿದ್ಧತೆ ಮತ್ತು ಕಾರ್ಯತಂತ್ರಗಳ ಬಗ್ಗೆ ಮಾರ್ಗದರ್ಶನ ಮಾಡಿದರು.
ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದೆ ಸ್ವತಂತ್ರವಾಗಿ ಸ್ಪರ್ಧಿಸಿರುವುದರಿಂದ ಅಭ್ಯರ್ಥಿಗಳ ಗೆಲುವಿಗೆ ಹೆಚ್ಚು ಶ್ರಮ ವಹಿಸಿ ಕೆಲಸ ಮಾಡುವಂತ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ನಿರ್ದೇಶನ ನೀಡಿದ್ದಾರೆ.
ಮುಂಬರುವ ವಿಧಾನಸಭೆ ಉಪಚುನಾವಣೆಗೆ ಸಿದ್ದತೆ ನಡೆಸಲಾಗುತ್ತಿರುವ ಹಿನ್ನೆಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಆಯಾ ಜಿಲ್ಲೆಯ ಮುಖಂಡರಿಗೆ ವಹಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸ್ಥಳೀಯ ಸಮಸ್ಯೆಗಳಿಗೆ ಪ್ರಮುಖವಾಗಿ ಪ್ರಸ್ತಾಪಿಸಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಮಾಡಿರುವ ಸಾಧನೆಗಳನ್ನು ಜನರ ಮುಂದಿಟ್ಟು ಮತಯಾಚನೆ ಮಾಡಲಾಗುತ್ತಿದೆ.
ಮೈತ್ರಿ ಸರ್ಕಾರದ ಅವಧಿಯಲ್ಲಿ ರೈತರ ಸಾಲಮನ್ನಾ , ಋಣಮುಕ್ತ ಕಾಯ್ದೆ, ಬಡವರಬಂಧು ಯೋಜನೆ ಮೊದಲಾವುಗಳ ಬಗ್ಗೆ ಜನರಲಿ ಜಾಗೃತಿ ಮೂಡಿಸಿ ಮತ ಗಳಿಸಲು ಜೆಡಿಎಸ್ ಉದ್ದೇಶಿಸಿದೆ.