ಬೆಂಗಳೂರು,ನ.೫- ಶತಾಯಗತಾಯ ಉಪಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸಿ ತಮ್ಮ ಕುರ್ಚಿ ಭದ್ರಪಡಿಸಿಕೊಳ್ಳಲು ಮುಂದಾಗಿರುವ ಬಿ.ಎಸ್.ಯಡಿಯೂರಪ್ಪ ಅನರ್ಹ ಶಾಸಕರ ಕ್ಷೇತ್ರದಲ್ಲಿ ಭರಪೂರ ಕೊಡುಗೆಗಳನ್ನು ನೀಡಲು ಮುಂದಾಗಿದ್ದಾರೆ.
ಇದೇ ೧೧ರಂದು ನೀತಿ ಸಂಹಿತೆ ಜಾರಿಯಾಗಲಿದ್ದು, ಅಷ್ಟರೊಳಗೆ ಉಪಚುನಾವಣೆ ನಡೆಯುವ ೧೫ ಕ್ಷೇತ್ರಗಳಲ್ಲಿ ಮತದಾರರ ಮನಸ್ಸು ಗೆಲ್ಲಲು ಅನುದಾನದ ಹೊಳೆಯನ್ನೇ ಹರಿಸಲಿದ್ದಾರೆ.
ಈಗಾಗಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ನಿನ್ನೆಯಷ್ಟೇ ೧೫೦ ಕೋಟಿ ರೂ. ಹೆಚ್ಚಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಚಾಲನೆ ನೀಡಿದ್ದಾರೆ.
ಕೆರೆಗಳಿಗೆ ನೀರು ತುಂಬಿಸುವುದು, ಬಾಕಿ ಉಳಿದಿದ್ದ ಕಾಮಗಾರಿಗಳಿಗೆ ಚಾಲನೆ ಹಾಗೂ ಅನುದಾನ ಬಿಡುಗಡೆ ಮಾಡುವ ಮೂಲಕ ಉಪಚುನಾವಣೆಗೆ ರಣಕಹಳೆ ಮೊಳಗಿಸಿದ್ದಾರೆ.
ಇದರ ಬೆನ್ನಲ್ಲೇ ಇದೇ ೮ರಂದು(ಶುಕ್ರವಾರ) ಮತ್ತೋರ್ವ ಕಾಂಗ್ರೆಸ್ನ ಅನರ್ಹ ಶಾಸಕ ಡಾ.ಸುಧಾಕರ್ ಪ್ರತಿನಿಧಿಸುವ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಭೇಟಿ ಕೊಟ್ಟು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕೊಡುವರು.
ಇಲ್ಲಿನ ಜನತೆಯ ಬಹುದಿನಗಳ ಬೇಡಿಕೆಯಂತೆ ಚಿಕ್ಕಬಳ್ಳಾಪುರ ಜಿಲ್ಲೆಗೆ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದಕ್ಕಾಗಿ ರೂ.೩೨೫ ಕೋಟಿ ಅನುದಾನ ಬಿಡುಗಡೆ ಮಾಡಲಿದ್ದಾರೆ.
ಮಂಚೇನಹಳ್ಳಿಯನ್ನು ತಾಲ್ಲೂಕು ಕೇಂದ್ರವಾಗಿ ಕಳೆದ ಸಚಿವ ಸಂಪುಟ ಸಭೆಯಲ್ಲಿ ಘೋಷಣೆ ಮಾಡಲಾಗಿದೆ. ಶುಕ್ರವಾರ ನಡೆಯಲಿರುವ ಸಮಾರಂಭದಲ್ಲಿ ಜಿಲ್ಲೆಯ ವಿವಿಧ ಕೆರೆಗಳಿಗೆ ನೀರು ತುಂಬಿಸುವುದು, ಇತರೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಸೇರಿದಂತೆ ಸುಮಾರು ೧೫೦ ಕೋಟಿಗೂ ಹೆಚ್ಚು ವಿವಿಧ ಕಾಮಗಾರಿಗಳಿಗೆ ಬಿಎಸ್ವೈ ಚಾಲನೆ ಕೊಡಲಿದ್ದಾರೆ.
ಈ ನಡುವೆ ಬಳ್ಳಾರಿಯ ವಿಜಯನಗರ ಕ್ಷೇತ್ರಕ್ಕೆ ರೂ.೪೦ ಕೋಟಿಯನ್ನು ಯಡಿಯೂರಪ್ಪ ಅವರು ಬಿಡುಗಡೆ ಮಾಡಲಿದ್ದಾರೆಂದು ಬಿಜೆಪಿ ಮೂಲಗಳು ತಿಳಿಸಿವೆ.
ಈ ಬಗ್ಗೆ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿರುವ ಯಡಿಯೂರಪ್ಪ ಅವರು, ಈ ಹಿಂದೆಯೇ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಲಾಗಿತ್ತು.ಇದೀಗ ನಾನು ಹಣವನ್ನು ಬಿಡುಗಡೆ ಮಾಡುತಿದ್ದೇನೆ ಅಷ್ಟೇ ಎಂದು ತಿಳಿಸಿದ್ದಾರೆ.
ಇದೇ ರೀತಿ ಮೈಸೂರು ಜಿಲ್ಲೆಯ ಹುಣಸೂರು ಕ್ಷೇತ್ರದಲ್ಲೂ ಮುಂದಿನ ವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವರು. ಬಳಿಕ ಬಳ್ಳಾರಿಯ ವಿಜಯನಗರ, ಹಾವೇರಿಯ ರಾಣೆಬೆನ್ನೂರು ಹಾಗೂ ಬೆಳಗಾವಿಯ ವಿವಿಧ ಕ್ಷೇತ್ರಗಳಿಗೂ ಯಡಿಯೂರಪ್ಪ ಭೇಟಿ ಕೊಡಲಿದ್ದಾರೆ.
ಹುಬ್ಬಳ್ಳಿಯಲ್ಲಿ ಇತ್ತೀಚೆಗಷ್ಟೇ ಕೋರ್ ಕಮಿಟಿ ಸಭೆ ಕರೆದಿದ್ದ ಅವರು ಉಪಚುನಾವಣೆ ಸಿದ್ಧತೆ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಈ ನಡುವೆ ಕಾಂಗ್ರೆಸ್ ೮ ವಿಧಾನಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ೧೫ ಕ್ಷೇತ್ರಗಳಿಗೂ ತಮ್ಮ ಪಕ್ಷದಿಂದ ಅಭ್ಯರ್ಥಿಗಳನ್ನು ನಿಲ್ಲಿಸುವುದಾಗಿ ಹೇಳಿದ್ದು, ಈ ಮೂಲಕ ಮತ್ತೊಮ್ಮೆ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂಬ ಸಂದೇಶವನ್ನು ಸಾರಿದ್ದಾರೆ.
ಈ ಬಾರಿಯ ಉಪ ಚುನಾವಣೆ ಯಡಿಯೂರಪ್ಪ ಅವರಿಗೆ ದೊಡ್ಡ ಸವಾಲಾಗಲಿದ್ದು, ಚುನಾವಣೆಯಲ್ಲಿ ಗೆಲ್ಲಲೇ ಬೇಕಾಗಿದೆ.ಚುನಾವಣಾ ಗೆಲುವು ಕೇವಲ ಯಡಿಯೂರಪ್ಪ ಅವರ ಪ್ರತಿಷ್ಠೆಗಷ್ಟೇ ಸಂಬಂಧಿಸಿದ್ದಲ್ಲ, ಸರ್ಕಾರದ ಅಳಿವು-ಉಳಿವಿಗೂ ಸಂಬಂಧಿಸಿದ್ದಾಗಿದೆ.
ಈ ಹಿನ್ನೆಲೆಯಲ್ಲಿ ಡಿಸೆಂಬರ್ ೫ ರಂದು ನಡೆಯಲಿರುವ ಉಪಚುನಾವಣಾ ಸಮರವನ್ನು ಗಂಭೀರವಾಗಿ ಪರಿಗಣಿಸಿರುವ ಬಿಎಸ್ವೈ ಮೈತ್ರಿ ಸರ್ಕಾರ ಬೀಳಿಸಲು ಪ್ರಮುಖ ಪಾತ್ರ ವಹಿಸಿದ್ದ ಅನರ್ಹ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ಭಾರೀ ಮೊತ್ತದ ಅನುದಾನ ಬಿಡುಗಡೆ ಮಾಡಲಿದ್ದಾರೆ.