ಬೆಂಗಳೂರು,ನ.7- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಇಂದಿನಿಂದ ಎರಡು ದಿನಗಳ ಕಾಲ ಮೈಸೂರು-ಮಂಡ್ಯ ಪ್ರವಾಸ ಕೈಗೊಳ್ಳುತ್ತಿದ್ದು, ಅಲ್ಲಿನ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಿಂದ ಶತಾಬ್ದಿ ಎಕ್ಸ್ಪ್ರೆಸ್ ರೈಲಿನಲ್ಲಿ ಮೈಸೂರಿಗೆ ತೆರಳಿದ ಡಿ.ಕೆ.ಶಿವಕುಮಾರ್ ಅಲ್ಲಿಂದ ನಂಜನಗೂಡಿಗೆ ಭೇಟಿ ನೀಡಿ ನಂಜುಂಡೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.ಸಂಜೆ ಮೈಸೂರಿಗೆ ಬಂದು ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದಿದ್ದಲ್ಲದೆ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ರಾತ್ರಿ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿರುವ ಶಿವಕುಮಾರ್ ನಾಳೆ ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಆನಂತರ ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ನಿಮಿಷಾಂಭ ದೇವಾಲಯಹಾಗೂ ಟಿಪ್ಪು ಮಸೀದಿಗೂ ಭೇಟಿ ನೀಡಲಿದ್ದಾರೆ.
ಮಧ್ಯಾಹ್ನ ಕಾಳಿಕಾಂಬ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಡಿ.ಕೆ.ಶಿವಕುಮಾರ್ ಬಳಿಕ ಮದ್ದೂರಿನ ಮದ್ದೂರಮ್ಮ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ.
ಸಂಜೆ ಬೆಂಗಳೂರಿಗೆ ವಾಪಸ್ಸಾಗುವ ವೇಳೆ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಮಾಜಿ ಡಿಸಿಎಂ ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಲಿದ್ದಾರೆ. ನಂತರ ಚನ್ನಪಟ್ಟಣದಿಂದ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.