ಬೆಂಗಳೂರು,ನ.8-ಮಿಂಟೋ ಆಸ್ಪತ್ರೆ ವೈದ್ಯರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ವಿವಿಪುರಂ ಠಾಣೆ ಪೋಲೀಸರು ಸಂಘಟನೆಯೊಂದರ 12 ಮಂದಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಇತ್ತೀಚೆಗೆ ಮಿಂಟೋ ಆಸ್ಪತ್ರೆಯಲ್ಲಿ ಕಣ್ಣಿನ ಚಿಕಿತ್ಸೆ ಪಡೆದಿದ್ದ 21 ಮಂದಿಗೆ ದೃಷ್ಟಿದೋಷ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಪರಿಹಾರ ಸಿಕ್ಕಿರಲಿಲ್ಲ. ವಿಷಯ ತಿಳಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿ ಪರಿಹಾರಕ್ಕಾಗಿ ಒತ್ತಾಯಿಸಿದ್ದರು.
ಆ ಸಂದರ್ಭದಲ್ಲಿ ವೈದ್ಯರು ಸ್ಪಂದಿಸಲಿಲ್ಲ. ಈ ವಿಷಯವಾಗಿ ವೈದ್ಯರು ಹಾಗೂ ಕರವೇ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ತಳ್ಳಾಟ ನೂಕಾಟ ಉಂಟಾಗಿತ್ತು.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಮಿಂಟೋ ಆಸ್ಪತ್ರೆ ಹಿರಿಯ ವೈದ್ಯರು ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಕರವೇ ಕಾರ್ಯಕರ್ತರ ವಿರುದ್ದ ವಿವಿಪುರಂ ಠಾಣೆಗೆ ದೂರು ನೀಡಿದ್ದರು.
ಈ ಘಟನೆಯನ್ನು ಖಂಡಿಸಿ ಆಸ್ಪತ್ರೆಯ ಕಿರಿಯ ವೈದ್ಯರು ಒಪಿಡಿ ಬಂದ್ ಮಾಡಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದರು. ಕರವೇ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.