ಚುನಾವಣೆಯಲ್ಲಿ ಏಕಾಂಗಿಯಾಗಿ ಪ್ರಚಾರದಲ್ಲಿ ತೊಡಗಿರುವ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,  ನ.8-ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಏಕಾಂಗಿಯಾಗಿ ಪ್ರಚಾರದಲ್ಲಿ ತೊಡಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪಚುನಾವಣೆಯಲ್ಲೂ ಒಂಟಿತನ ಕಾಡಲಿದೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಮೈತ್ರಿ ಸರ್ಕಾರ ಪತನದ ನಂತರ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್‍ನಲ್ಲಿ ಅಸಮಾಧಾನ ಭುಗಿಲೆದ್ದಿವೆ. ಹಿರಿಯ ಕಾಂಗ್ರೆಸ್ಸಿಗರ ಅಡೆತಡೆಗಳ ನಡುವೆಯೂ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ನೀಡಿದೆ.

ಸಿದ್ದರಾಮಯ್ಯ ಕೂಡ ಅದಕ್ಕೆ ತಕ್ಕಂತೆ ರಾಜ್ಯಾದ್ಯಂತ ಪ್ರವಾಸ ಮಾಡಿ ಚುನಾವಣೆಯ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಸ್ಥಳೀಯ ಸಂಸ್ಥೆಗಳಿಗೆ ನಡೆಯುತ್ತಿರುವ ಚುನಾವಣಾ ಪ್ರಚಾರದಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್, ಸಿದ್ದರಾಮಯ್ಯ ಅವರಿಗೆ ಸಾಥ್ ನೀಡಿದ್ದಾರೆ. ಉಳಿದಂತೆ ರಾಜ್ಯದ ಯಾವ ಪ್ರಮುಖ ನಾಯಕರು ಸಿದ್ದರಾಮಯ್ಯ ಅವರ ಜೊತೆ ಪ್ರವಾಸ ಕೈಗೊಳ್ಳುತ್ತಿಲ್ಲ. ಹೈಕಮಾಂಡ್ ಸಿದ್ದರಾಮಯ್ಯ ಅವರ ನಾಯಕತ್ವದ ಮೇಲೆ ಅತಿ ವಿಶ್ವಾಸ ಹೊಂದಿರುವುದು ರಾಜ್ಯ ನಾಯಕರಿಗೆ ನುಂಗಲಾರದ ತುತ್ತಾಗಿದೆ. ಹೀಗಾಗಿ ಈ ಬಾರಿ 15 ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆ ಸಿದ್ದರಾಮಯ್ಯ ಅವರ ಶಕ್ತಿಪ್ರದರ್ಶನಕ್ಕೆ ಅಖಾಡವಾಗಲಿದೆ.

ಬಹುತೇಕ ಕಾಂಗ್ರೆಸ್ ನಾಯಕರು ಉಪಚುನಾವಣಾ ಕಣದಿಂದ ದೂರ ಉಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಪಿಸಿಸಿ ಈಗಾಗಲೇ  ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಉಸ್ತುವಾರಿ ನಾಯಕರ ಹೆಸರುಗಳನ್ನು ಪ್ರಕಟಿಸಿದೆ.

ಅವರನ್ನು ಹೊರತುಪಡಿಸಿ ಉಳಿದಂತೆ ಪ್ರಭಾವಿ ನಾಯಕರು ಅದೇ ಜಿಲ್ಲೆಯವರಾಗಿದ್ದರೂ ಕೂಡ ಚುನಾವಣಾ ಕೆಲಸಗಳಲ್ಲಿ ಗಂಭೀರವಾಗಿ ತೊಡಗಿಸಿಕೊಳ್ಳುತ್ತಿಲ್ಲ. ಉಪಚುನಾವಣೆ ನಡೆಯುವ 15 ಕ್ಷೇತ್ರಗಳ ಪೈಕಿ 11 ಕ್ಷೇತ್ರಗಳಲ್ಲಿ ಈ ಹಿಂದೆ ಕಾಂಗ್ರೆಸ್ ಗೆದ್ದಿತ್ತು. ಮತ್ತೆ ಅಷ್ಟೂ ಕ್ಷೇತ್ರಗಳನ್ನು  ಮರು ವಶ ಮಾಡಿಕೊಳ್ಳುವುದು ಕಾಂಗ್ರೆಸ್‍ಗೆ ಸವಾಲಿನ ಕೆಲಸವೇ ಸರಿ.

ಆಡಳಿತಾರೂಢ ಬಿಜೆಪಿ ಒಂದು ಕಡೆಯಾದರೆ, ಮತ್ತೊಂದು ಕಡೆ  ದೋಸ್ತಿಯಾಗಿದ್ದ ಜೆಡಿಎಸ್ ಈಗ ಎದುರಾಳಿಯಾಗಿ ನಿಂತಿದೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಉಪಚುನಾವಣೆ ಗೆಲ್ಲುವುದು ಸುಲಭದ ಮಾತಲ್ಲ. ಒಂದು ವೇಳೆ 11 ಕ್ಷೇತ್ರಗಳನ್ನು ಕಾಂಗ್ರೆಸ್ ಉಳಿಸಿಕೊಂಡಿದ್ದೇ ಆದರೆ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೂ ಪೆಟ್ಟು  ಬೀಳಲಿದೆ.

ಈ ಎಲ್ಲಾ ಲೆಕ್ಕಾಚಾರಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ.ಅದಕ್ಕಾಗಿಯೇ ಒಂದು ತಿಂಗಳ ಮೊದಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.ಆದರೆ  ರಾಜ್ಯ ಕಾಂಗ್ರೆಸ್‍ನಲ್ಲಿ ಆಂತರಿಕ ಕಿತ್ತಾಟದಿಂದಾಗಿ ಸೋಲು-ಗೆಲುವಿನ ಲೆಕ್ಕಾಚಾರಗಳು   ನಾಯಕತ್ವಕ್ಕೆ ಅಗ್ನಿಪರೀಕ್ಷೆಗೊಡ್ಡಿವೆ.

ಈ ಮೊದಲೆಲ್ಲಾ ಸಂಘಟಿತ ಹೋರಾಟದಿಂದಾಗಿ ಕಾಂಗ್ರೆಸ್ ಚುನಾವಣೆಗಳನ್ನು ಎದುರಿಸಿತ್ತು.ಆದರೆ ಅದರ ಗೆಲುವಿನ ಕೀರ್ತಿಯನ್ನು ಸಿದ್ದರಾಮಯ್ಯ ತೆಗೆದುಕೊಳ್ಳುತ್ತಿದ್ದರು. ಪಕ್ಷಕ್ಕೆ ಬಂದಾಗಿನಿಂದಲೂ ನಿರಂತರವಾಗಿ ಅಧಿಕಾರ ಅನುಭವಿಸುತ್ತಿರುವ ಸಿದ್ದರಾಮಯ್ಯ ಅವರ ನಾಯಕತ್ವವನ್ನು ಈ ಬಾರಿ ಪರೀಕ್ಷೆಗೆ ಒಡ್ಡಲೇಬೇಕು. ಉಪಚುನಾವಣೆಯಲ್ಲಿ 11 ಕ್ಷೇತ್ರಗಳನ್ನು ಗೆದ್ದಿದ್ದೇ ಆದರೆ ಅದಕ್ಕೆ ಸಿದ್ದರಾಮಯ್ಯ  ಅವರ ಜನಪ್ರಿಯತೆಯೇ ಕಾರಣ. ಒಂದು ವೇಳೆ ಸೋತಿದ್ದೆ ಆದರೆ  ಅದಕ್ಕೂ ಸಿದ್ದರಾಮಯ್ಯ ಅವರ ನಾಯಕತ್ವವೈಫಲ್ಯ ಕಾರಣವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಉಪಚುನಾವಣೆಯಲ್ಲಿ ಹಿನ್ನಡೆ ಕಂಡಿದ್ದೆ ಆದರೆ ಅದನ್ನು ಸಿದ್ದರಾಮಯ್ಯ ಅವರ ತಲೆಗೆ ಕಟ್ಟಿ  ವಿಪಕ್ಷ ನಾಯಕನ ಸ್ಥಾನದಿಂದ ಕೆಳಗಿಳಿಸಲು ಮತ್ತೊಂದು ಸುತ್ತಿನ ಹೋರಾಟ ಆರಂಭಿಸಲು ಮೂಲ ಕಾಂಗ್ರೆಸ್ಸಿಗರು ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಿಕೊಂಡಿದ್ದಾರೆ. ಹಾಗಾಗಿ ಉಪಚುನಾವಣಾ ಪ್ರಚಾರ ಕಣ ಕಾಂಗ್ರೆಸ್ ಪಾಳಯದಲ್ಲಿ ಬಣಗುಡುತ್ತಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ