
ಬೆಂಗಳೂರು, ನ.12-ರಕ್ತದೊತ್ತಡ, ಎದೆನೋವಿನಿಂದ ಬಳಲುತ್ತಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ನಿನ್ನೆ ರಾತ್ರಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಾರಿ ನಿರ್ದೇಶನಾಲಯದ ವಿಚಾರಣೆ ಹಾಗೂ ಬಂಧನದ ನಂತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಡಿ.ಕೆ.ಶಿವಕುಮಾರ್ ಅವರು, ತಿಹಾರ್ ಜೈಲಿನಿಂದ ಬಿಡುಗಡೆಯಾದ ಬಳಿಕ ಮೂರು ದಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.
ಆನಂತರಮಂಡ್ಯ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಅಲ್ಲಿನ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ್ದರು. ನಿನ್ನೆ ರಾತ್ರಿ ಇದ್ದಕ್ಕಿದ್ದಂತೆ ರಕ್ತದೊತ್ತಡ ಕುಸಿದಿದ್ದು, ಬೆನ್ನು ನೋವು ತೀವ್ರವಾಗಿ ನಿತ್ರಾಣರಾಗಿದ್ದರು. ಎದೆನೋವಿನ ಸಮಸ್ಯೆ ಕೂಡ ಕಾಣಿಸಿಕೊಂಡಿತ್ತು. ಹೀಗಾಗಿ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಅವರನ್ನು ಶೇಷಾದ್ರಿಪುರಂ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರಿಗೆ ಮೂರು ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ಅವಶ್ಯಕತೆ ಇದೆ ಎಂದು ವೈದ್ಯರಾದ ಡಾ.ಶಂಕರ್ ಶಿಫಾರಸು ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರನ್ನು ನೋಡಲು ದಯವಿಟ್ಟು ಯಾರೂ ಬರಬೇಡಿ ಎಂದು ಕುಟುಂಬ ಸದಸ್ಯರು ಮನವಿ ಮಾಡಿದ್ದಾರೆ.
ಕಳೆದ ಬಾರಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾಗ ನೂರಾರು ಅಭಿಮಾನಿಗಳು, ಕಾರ್ಯಕರ್ತರು ಬಂದು ಭೇಟಿ ಮಾಡಿದ್ದರಿಂದಾಗಿ ಅವರಿಗೆ ವಿಶ್ರಾಂತಿ ಸಿಗಲಿಲ್ಲ. ಚಿಕಿತ್ಸೆ ಪೂರ್ಣ ಪ್ರಮಾಣದಲ್ಲಿ ಪಡೆಯಲಾಗಲಿಲ್ಲ. ಡಿ.ಕೆ.ಶಿವಕುಮಾರ್ ಆರೋಗ್ಯ ದೃಷ್ಟಿಯಿಂದ ಅವರ ಅಭಿಮಾನಿಗಳು, ಕಾರ್ಯಕರ್ತರು, ಮುಖಂಡರು ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ.