ಬೆಂಗಳೂರು, ನ.15-ತೀವ್ರ ಕುತೂಹಲ ಕೆರಳಿಸಿರುವ ತ್ರಕ್ಕೆ ಜೆಡಿಎಸ್ ಇನ್ನು ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಈ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳ ನಡುವೆ ಪೈಪೋಟಿ ಹೆಚ್ಚಾಗಿರುವುದರಿಂದ ಅಭ್ಯರ್ಥಿಯನ್ನು ಅಂತಿಮ ಗೊಳಿಸುವುದನ್ನು ಪಕ್ಷದ ವರಿಷ್ಠರು ವಿಳಂಬ ಮಾಡಿದ್ದಾರೆ. ಇಂದು ಸಂಜೆ ವೇಳೆಗೆ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಅಭ್ಯರ್ಥಿಯನ್ನು ಅಂತಿಮಗೊಳಿಸಿ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ.
ಅಭ್ಯರ್ಥಿ ಆಯ್ಕೆ ಸಂಬಂಧ ಪಕ್ಷದ ವರಿಷ್ಠರು ಈಗಾಗಲೇ ಹಲವು ಸುತ್ತಿನ ಸಭೆಗಳನ್ನು ನಡೆಸಿದ್ದು, ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯಗಳನ್ನು ಪಡೆದುಕೊಂಡಿದ್ದಾರೆ.
ಕಳೆದೆರಡು ದಿನಗಳಿಂದಲೂ ನಿರಂತರವಾಗಿ ಸಭೆ ನಡೆಸಿದ್ದರೂ ಅಭ್ಯರ್ಥಿ ಆಯ್ಕೆ ಇನ್ನೂ ಅಂತಿಮಗೊಂಡಿಲ್ಲ. ಬುಧವಾರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಅಭ್ಯರ್ಥಿ ಆಯ್ಕೆ ಸಂಬಂಧ ಸಭೆ ನಡೆಸಲಾಗಿತ್ತು.
ನಿನ್ನೆ ಕೂಡ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಮುಖಂಡರು, ಬೆಂಗಳೂರು ನಗರದ ಪಕ್ಷದ ಮುಖಂಡರ ಸಭೆ ನಡೆಸಲಾಗಿದ್ದರೂ ಅಭ್ಯರ್ಥಿ ಆಯ್ಕೆಯನ್ನು ಮಾಡಿರಲಿಲ್ಲ.
ಇಂದು ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಎಚ್.ಡಿ.ಕುಮಾರಸ್ವಾಮಿಯವರು ಪಕ್ಷದ ಮುಖಂಡರೊಂದಿಗೆ ಮತ್ತೊಂದು ಸುತ್ತಿನ ಸಮಾಲೋಚನೆ ನಡೆಸಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಉದ್ದೇಶ ಹೊಂದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕ್ಷೇತ್ರದ ಪ್ರಮುಖ ಟಿಕೆಟ್ ಆಕಾಂಕ್ಷಿಯಾಗಿದ್ದ ಜೆಡಿಎಸ್ ಬೆಂಗಳೂರು ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಹಿಂದೆ ಸರಿದಿದ್ದು, ಯಾರೇ ಅಭ್ಯರ್ಥಿಯಾದರೂ ಗೆಲುವಿಗೆ ಶ್ರಮಿಸುವುದಾಗಿ ಹೇಳಿದ್ದಾರೆ.
ಮಾಜಿ ಉಪಮೇಯರ್ ಭದ್ರೇಗೌಡ, ಕಾಮಾಕ್ಷಿಪಾಳ್ಯದ ರಾಜಣ್ಣ, ಕಾಂಗ್ರೆಸ್ ಮುಖಂಡ ಗಿರೀಶ್ ಕೆ.ನಾಶಿ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಈ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿ ಚುನಾಯಿತರಾಗಿ ಪಕ್ಷಕ್ಕೆ ದ್ರೋಹ ಬಗೆದಿರುವವರಿಗೆ ತಕ್ಕ ಪಾಠ ಕಲಿಸಬೇಕೆಂದು ನಿಶ್ಚಯಿಸಿರುವುದಾಗಿ ಹೇಳಿದ್ದಾರೆ. ಇದಕ್ಕಾಗಿ ಬಿಜೆಪಿ ಅಭ್ಯರ್ಥಿಗೆ ಸರಿಸಮನಾದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿಯೂ ಹೇಳಿದ್ದಾರೆ.
ಎಲ್ಲಾ ರೀತಿಯಿಂದಲೂ ಬಿಜೆಪಿ ಅಭ್ಯರ್ಥಿಗೆ ಪ್ರಬಲ ಪೈಪೋಟಿ ಒಡ್ಡುವಂತಹ ಅಭ್ಯರ್ಥಿಗೆ ಹುಡುಕಾಟ ನಡೆಸಿದ್ದು, ಕೊನೆ ಘಳಿಗೆಯಲ್ಲಿ ಯಾರನ್ನು ಕಣಕ್ಕಿಳಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.