ಬೆಂಗಳೂರು,ನ.15-ಉಪಚುನಾವಣೆ ಫಲಿತಾಂಶ ಪ್ರಕಟವಾಗುವ ಡಿಸೆಂಬರ್ 9ರ ನಂತರ ರಾಜ್ಯ ರಾಜಕೀಯಕ್ಕೆ ಹೊಸ ತಿರುವು ಸಿಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.9ರಂದು ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಅಂದು ರಾಜ್ಯ ರಾಜಕೀಯಕ್ಕೆ ಹೊಸ ತಿರುವು ಸಿಗಲಿದೆ ಎಂದು ಸೂಚ್ಯವಾಗಿ ನುಡಿದರು.
ಮುಂದಿನ ಮೂರುವರೆ ವರ್ಷಗಳ ಕಾಲ ನಾವು ಸುಭದ್ರ ಸರ್ಕಾರ ಕೊಡಲು ಈ ಫಲಿತಾಂಶ ಪುಷ್ಠಿ ನೀಡಲಿದೆ. ನಾವು ಸ್ಪಷ್ಟ ಬಹುಮತ ಪಡೆದು ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನಡೆಸುತ್ತೇವೆ ಎಂದು ಹೇಳಿದರು.
ರಾಜ್ಯದ ಮತದಾರರು ಸುಭದ್ರ ಸರ್ಕಾರ ಇದ್ದರೆ ಅಭಿವೃದ್ಧಿಗೆ ಅನುಕೂಲವಾಗುತ್ತದೆ ಎಂಬ ಕಾರಣಕ್ಕಾಗಿ 15ಕ್ಕೆ 15 ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆ. ಫಲಿತಾಂಶ ಬಂದಾಗ ಕಾಂಗ್ರೆಸ್ ಮತ್ತು ಜೆಡಿಎಸ್ಗೆ ನಿರಾಸೆ ಕಟ್ಟಿಟ್ಟ ಬುತ್ತಿ ಎಂದು ಭವಿಷ್ಯ ನುಡಿದರು.
ಈಗಾಗಲೇ 15 ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಅಭ್ಯರ್ಥಿಗಳ ಪರ ಪ್ರಚಾರ ಆರಂಭಿಸಿದ್ದಾರೆ. ನಾನು ಎಲ್ಲೆಲ್ಲಿ ಪ್ರಚಾರ ಮಾಡಬೇಕು ಎಂಬುದನ್ನು ರಾಜ್ಯ ಘಟಕ ಸೂಚಿಸುತ್ತದೆ. ಅದರಂತೆ ಸಾಮಾನ್ಯ ಕಾರ್ಯಕರ್ತನಾಗಿ ಪ್ರಚಾರ ಮಾಡುವೆ ಎಂದರು.
ಟಿಕೆಟ್ ಕೊಡಲು ಸಾಧ್ಯವಿಲ್ಲ:
ಇನ್ನು ಶಿವಾಜಿನಗರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ರೋಷನ್ಬೇಗ್ಗೆ ಈ ಸಂದರ್ಭದಲ್ಲಿ ಟಿಕೆಟ್ ಕೊಡಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಬೇರೆ ಬೇರೆ ಕಾರಣಗಳಿಗಾಗಿ ಅವರಿಗೆ ಟಿಕೆಟ್ ಕೈ ತಪ್ಪಿರಬಹುದು.
ಕ್ಷೇತ್ರದಲ್ಲಿ ತಮಿಳು ಮತಗಳು ಹೆಚ್ಚಾಗಿರುವ ಕಾರಣ ಈಗಾಗಲೇ ಶರವಣ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಅವರ ಪರವಾಗಿ ಕೆಲಸ ಮಾಡುವಂತೆ ಮನವಿ ಮಾಡಿದ್ದೇನೆ. ಉಳಿದದ್ದು ಅವರ ತೀರ್ಮಾನಕ್ಕೆ ಬಿಟ್ಟಿದ್ದು ಎಂದು ಹೇಳಿದರು.
ಪಕ್ಷೇತರ ಅಭ್ಯರ್ಥಿಯಾಗಿ ರೋಷನ್ ಬೇಗ್ ಕಣಕ್ಕಿಳಿದರೆ? ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿಎಸ್ವೈ, ನಾನು ನಮ್ಮ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡುವಂತೆ ಕೇಳಿಕೊಂಡಿದ್ದೇನೆ. ಅವರು ಪಕ್ಷೇತರರಾಗಿ ಕಣಕ್ಕಿಳಿಯುತ್ತೇನೆ ಎಂದರೆ ಬೇಡ ಎನ್ನಲು ನಾನ್ಯಾರು? ಅವರು ಯಾವುದೇ ತೀರ್ಮಾನ ಕೈಗೊಳ್ಳಲು ಸರ್ವಸ್ವತಂತ್ರರು ಎಂದರು.
ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡಗೆ ಜೆಡಿಎಸ್ ಬೆಂಬಲ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಯಾರು ಯಾರಿಗೆ ಬೆಂಬಲ ಕೊಟ್ಟರೂ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುವುದಷ್ಟೇ ನಮ್ಮ ಮುಂದಿನ ಗುರಿ ಎಂದು ಹೇಳಿದರು.
ಮಂತ್ರಿ ಮಾಡುವೆ: ನಾನು ಒಂದುಬಾರಿ ಯಾರಿಗಾದರೂ ಭರವಸೆ ಕೊಟ್ಟರೆ ಹಿಂತಿರುಗಿ ನೋಡುವ ಪ್ರಶ್ನೆಯೇ ಇಲ್ಲ. ಆರ್.ಶಂಕರ್ಗೆ ಕೊಟ್ಟಿರುವ ಮಾತಿನಂತೆ ಅವರನ್ನು ಮೇಲ್ಮನೆಗೆ ಆಯ್ಕೆ ಮಾಡಿ ಮಂತ್ರಿ ಮಾಡೇ ಮಾಡುತ್ತೇನೆ. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಸಂಶಯ ಬೇಡ ಎಂದು ಸ್ಪಷ್ಟಪಡಿಸಿದರು.