ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರ-ಬಿಜೆಪಿಯಿಂದ ಅರುಣ್‍ಕುಮಾರ್ ಪೂಜಾರ್ ಗೆ ಟಿಕೆಟ್

ಬೆಂಗಳೂರು,ನ.15- ತೀವ್ರ ಕುತೂಹಲ ಕೆರಳಿಸಿದ್ದ ಹಾವೇರಿ ಜಿಲ್ಲೆ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಅರುಣ್‍ಕುಮಾರ್ ಪೂಜಾರ್‍ಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಈ ಕ್ಷೇತ್ರದಿಂದ ಸ್ಪರ್ಧಿಸಲು ಆಕಾಂಕ್ಷಿಗಳ ದಂಡು ಹನುಮಂತನ ಬಾಲದಂತೆ ಬೆಳೆದಿತ್ತು. ಯಾರಿಗೇ ಟಿಕೆಟ್ ಕೊಟ್ಟರೂ ಅಸಮಾಧಾನ ವ್ಯಕ್ತವಾಗಬಹುದೆಂಬ ಹಿನ್ನೆಲೆಯಲ್ಲಿ ವರಿಷ್ಠರು ಅರುಣ್ ಪೂಜಾರಿಗೆ ಮಣೆ ಹಾಕಿದ್ದಾರೆ.

ಬೆಂಗಳೂರಿನಲ್ಲಿ ಇದನ್ನು ಖಚಿತಪಡಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದಿಂದ ಅರುಣ್‍ಕುಮಾರ್ ಪೂಜಾರ್ ಕಣಕ್ಕಿಳಿಯಲಿದ್ದಾರೆ. ಎಲ್ಲರೂ ಅವರ ಗೆಲುವಿಗೆ ಶ್ರಮಿಸಬೇಕೆಂದು ಸೂಚಿಸಿದರು.

ಇನ್ನು ನಿನ್ನೆ ಕೇಂದ್ರ ಬಿಜೆಪಿ ವರಿಷ್ಠರು ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ 14 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದರು. ರಾಣೆಬೆನ್ನೂರು ಕ್ಷೇತ್ರಕ್ಕೆ ಯಾವುದೇ ಹೆಸರನ್ನು ಘೋಷಿಸದೆ ಹಾಗೆಯೇ ಉಳಿಸಿಕೊಳ್ಳಲಾಗಿತ್ತು.

ಈ ಕ್ಷೇತ್ರದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪನವರ ಪುತ್ರ ಕೆ.ಇ.ಕಾಂತೇಶ್, ಬಿಜೆಪಿಗೆ ಸೇರ್ಪಡೆಗೊಂಡಿದ್ದ ಮಾಜಿ ಸಚಿವ ಆರ್.ಶಂಕರ್, ಮಾಜಿ ಶಾಸಕರಾದ ಹಾವೇರಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವರಾಜ್ ಸಜ್ಜನ್,ರಾಜ್ಯ ಬಿಜೆಪಿ ಕಾರ್ಯದರ್ಶಿ ಭಾರತಿ ಜಂಬಗಿ ಸೇರಿದಂತೆ ಹಲವರು ಆಕಾಂಕ್ಷಿಗಳಾಗಿದ್ದರು.

ರಾಣೆಬೆನ್ನೂರಿಗೆ ಟಿಕೆಟ್ ನೀಡುವುದು ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಹೀಗಾಗಿ ಬಿಜೆಪಿ ಘಟಕದ ವತಿಯಿಂದ ಸಚಿವರಾದ ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವ ಸಿ.ಎಂ.ಉದಾಸಿ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಲಾಗಿತ್ತು.

ಈ ಸಮಿತಿಯ ವರದಿ ಅನ್ವಯ ಅರುಣ್‍ಕುಮಾರ್ ಪೂಜಾರ್‍ಗೆ ರಾಣೆಬೆನ್ನೂರಿನಿಂದ ಟಿಕೆಟ್ ಘೋಷಿಸಲಾಗಿದೆ. ಅಲ್ಲಿಗೆ 15 ವಿಧಾನಸಭಾ ಕ್ಷೇತ್ರಗಳಿಗೂ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ