ಬೆಂಗಳೂರು,ನ.23- ಶತಾಯ ಗತಾಯ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎಲ್ಲ ಸ್ಥಾನಗಳನ್ನು ಗೆಲ್ಲಲೇಬೇಕೆಂದು ಪಟ್ಟು ಹಿಡಿದಿರುವ ಆಡಳಿತಾರೂಢ ಬಿಜೆಪಿಯ ಪ್ರಮುಖರು ಇಂದು ಪ್ರಚಾರಕ್ಕೆ ಧುಮುಕುವ ಮೂಲಕ ವಿದ್ಯುಕ್ತವಾಗಿ ರಣಕಹಳೆ ಮೊಳಗಿಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಪ್ರಹ್ಲಾದ್ ಜೋಷಿ, ಸುರೇಶ್ ಅಂಗಡಿ, ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರ್ ರಾವ್ ಸೇರಿದಂತೆ ಮತ್ತಿತರ ಪ್ರಮುಖರು ವಿವಿಧ ಕಡೆ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ಮಾಡಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕುಂದಾನಗರಿ ಬೆಳಗಾವಿ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಗ್ಗಿನಿಂದಲೇ ಬಿರುಸಿನ ಪ್ರಚಾರ ಮಾಡಿದರು.
ಮೊದಲು ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಹೇಶ್ ಕುಮಟಳ್ಳಿ ಪರ ಇಲ್ಲಿನ ಜೆಎ ಮೈದಾನದಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ತಮ್ಮ ಅಭ್ಯರ್ಥಿಯನ್ನು ಬಹುಮತಗಳಿಂದ ಆಯ್ಕೆ ಮಾಡಬೇಕೆಂದು ಹೇಳಿದರು.
ಅಥಣಿಯಲ್ಲಿ ಪ್ರಚಾರ ನಡೆಸಿದ ಬಳಿಕ ಬಿಎಸ್ವೈ ನೇರವಾಗಿ ಕಾಗವಾಡಕ್ಕೆ ಆಗಮಿಸಿದರು. ಬಿಜೆಪಿ ಅಭ್ಯರ್ಥಿಯಾಗಿ ಸ್ಫರ್ಧೆ ಮಾಡಿರುವ ಮಾಜಿ ಶಾಸಕ ಶ್ರೀಮಂತಪಾಟೀಲ್ ಪರವಾಗಿ ತಾಲ್ಲೂಕಿನ ವಿವಿಧ ಕಡೆ ಬಹಿರಂಗ ಪ್ರಚಾರ, ರೋಡ್ ಶೋ ನಡೆಸಿದರು.
ಶ್ರೀಮಂತ ಪಾಟೀಲ್ ಯಾವುದೇ ಸ್ವಾರ್ಥ ಸಾಧನೆಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಕ್ಷೇತ್ರದಲ್ಲಿ ಮತದಾರರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂಬ ಕಾರಣಕ್ಕೆ ತಮ್ಮ ಸ್ಥಾನವನ್ನೇ ತ್ಯಾಗ ಮಾಡಿದ್ದಾರೆ. ಅವರನ್ನು ಉಪಚುನಾವಣೆಯಲ್ಲಿ ಕೈ ಹಿಡಿಯುವ ಮೂಲಕ ಮತ್ತೊಮ್ಮೆ ಆಶೀರ್ವಾದ ಮಾಡಬೇಕೆಂದು ಕರೆ ಕೊಟ್ಟರು.
ಕಾಗವಾಡದಲ್ಲಿ ಪ್ರಚಾರ ನಡೆಸಿದ ಬಳಿಕ ಸಂಜೆ ಗೋಕಾಕ್ನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಪರ ಮತಯಾಚನೆ ಮಾಡಿದರು. ಈ ವೇಳೆ ಮುಖ್ಯಮಂತ್ರಿಯವರಿಗೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಸಚಿವರಾದ ಕೆ.ಎಸ್.ಈಶ್ವರಪ್ಪ , ಸುರೇಶ್ ಅಂಗಡಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಶಾಸಕರು ಮತ್ತು ಮುಖಂಡರು ಸಾಥ್ ನೀಡಿದರು.
ಸಕ್ಕರೆ ನಾಡಿನಲ್ಲಿ ಕಟೀಲು:
ಇತ್ತ ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ಇಂದು ಅಭ್ಯರ್ಥಿಗಳ ಪರ ಬಿರುಸಿನ ಮತಯಾಚನೆ ಮಾಡಿದರು.
ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಖಾಡಕ್ಕಿಳಿದಿರುವ ಕೆ.ಸಿ.ನಾರಾಯಣಗೌಡ ಪರ ನಳೀನ್ಕುಮಾರ್ ಕಟೀಲ್ ತಾಲ್ಲೂಕಿನ ವಿವಿಧೆಡೆ ಪ್ರಚಾರ ಮಾಡಿದರು.
ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ರಾಘವೇಂದ್ರ, ಸಂಸದರಾದ ಪ್ರತಾಪ್ ಸಿಂಹ, ವಿ.ಶ್ರೀನಿವಾಸ್ ಪ್ರಸಾದ್, ಶಾಸಕರಾದ ಎಸ್.ಎ.ರಾಮ್ದಾಸ್, ನಾಗೇಂದ್ರ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರವಾಗಿ ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಕ್ಷೇತ್ರದ ವಿವಿಧೆಡೆ ಮತಯಾಚನೆ ಮಾಡಿದರು.
ಯಶವಂತಪುರ, ಮಹಾಲಕ್ಷ್ಮಿಲೇಔಟ್, ಕೆ.ಆರ್.ಪುರಂ ಹಾಗೂ ಶಿವಾಜಿನಗರದಲ್ಲಿ ಕೇಂದ್ರ ಸಚಿವ ಸದಾನಂದಗೌಡ, ಆರ್.ಅಶೋಕ್ , ಸಂಸದರು, ಶಾಸಕರು ಪ್ರಚಾರ ಮಾಡಿದರು.
15 ವಿಧಾನಸಭಾ ಕ್ಷೇತ್ರಗಳಲ್ಲೂ ಮುಖ್ಯಮಂತ್ರಿಯಾದಿಯಾಗಿ ಸಚಿವರು, ಶಾಸಕರು ಸೇರಿದಂತೆ ಎಲ್ಲರೂ ಪ್ರಚಾರದಲ್ಲಿ ತೊಡಗಿದ್ದು,ಚುನಾವನಾ ಪ್ರಚಾರ ಮತ್ತಷ್ಟು ಚುರುಕು ಪಡೆಯಲಿದೆ.