ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ನಿನ್ನೆಯಷ್ಟೇ ಸುಪ್ರೀಂ ಕೋರ್ಟಿನಿಂದ ಜಾಮೀನು ಪಡೆದಿದ್ದ ಕಾಂಗ್ರೆಸ್ ನಾಯಕ, ರಾಜ್ಯಸಭಾ ಸದಸ್ಯರಾದ ಪಿ.ಚಿದಂಬರಂ ಇಂದು ಸಂಸತ್ ಕಲಾಪಕ್ಕೆ ಹಾಜರಾದರು.
ದೆಹಲಿಯ ತಿಹಾರ್ ಜೈಲಿನಲ್ಲಿ ಬರೋಬ್ಬರಿ 105 ದಿನಗಳ ಕಾಲ ಇದ್ದ ಚಿದಂಬರಂ ಅವರನ್ನು ಆಗಸ್ಟ್ 21 ರಂದು ಸಿಬಿಐ ಬಂಧನ ಮಾಡಿತ್ತು. 2007 ರಲ್ಲಿ ಐಎನ್ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶಿ ಬಂಡವಾಳ ಹೂಡಿಕೆ ಪ್ರೋತ್ಸಾಹಕಾ ಮಂಡಳಿಯಿಂದ ದೊರೆತ ಅನುಮೋದನೆಯನ್ನು ಪುತ್ರ ಕಾರ್ತಿ ಚಿದಂಬರಂ ಅವರ ಶಿಫಾರಸಿನ ಮೇಲೆ ದೊರಕಿಸಿಕೊಟ್ಟಿದ್ದರು ಎಂಬ ಆರೋಪ ಅವರ ಮೇಲೆ ಕೇಳಿ ಬಂದಿತ್ತು.
ನ್ಯಾ. ಆರ್ ಭಾನುಮತಿ ನೇತೃತ್ವದ ತ್ರಿ ಸದಸ್ಯ ಪೀಠ ಚಿದಂಬರಂ ಡಿ.4 ರಂದು ಷರತ್ತುಬದ್ಧ ಜಾಮೀನು ನೀಡಿತ್ತು. ಈ ಮೂಲಕ ಸುಮಾರು 105 ದಿನಗಳ ಕಾಲ ತಿಹಾರ್ ಜೈಲಿನಲ್ಲಿದ್ದ ಕೇಂದ್ರದ ಮಾಜಿ ಸಚಿವರಿಗೆ ಬುಧವಾರ ಬಿಡುಗಡೆಯ ಭಾಗ್ಯ ದೊರೆತಿತ್ತು. 2 ಲಕ್ಷ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿ ಸೇರಿದಂತೆ, ಅನುಮತಿಯಿಲ್ಲದೆ ದೇಶ ಬಿಡುವಂತಿಲ್ಲ ಎಂದು ಷರತ್ತು ವಿಧಿಸಿ ಜಾಮೀನು ನೀಡಲಾಗಿದೆ.
ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಮಾಜಿ ಸಚಿವರು ಸಾರ್ವಜನಿಕ ಹೇಳಿಕೆ ಹಾಗೂ ಯಾವುದೇ ಮಾಧ್ಯಮಗಳಿಗೆ ಸಂದರ್ಶನ ನೀಡಬಾರದು ಎಂದು ಕೋರ್ಟ್ ಸೂಚಿಸಿತ್ತು. ನವೆಂಬರ್ 15ರಂದು ಪ್ರಕರಣ ಸಂಬಂಧ ಅರ್ಜಿ ವಿಚಾರಣೆ ನಡೆಸಿ ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿತ್ತು. ಐಎನ್ ಎಕ್ಸ್ ಪ್ರಕರಣದಲ್ಲಿ ಚಿದಂಬರಂ ಅವರದ್ದು ಪ್ರಮುಖ ಪಾತ್ರವಿದ್ದು, ಅವರಿಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು.
ಏನಿದು ಪ್ರಕರಣ?
ಚಿದಂಬರಂ ಅವರು 2007ರಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಐಎನ್ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶ ಬಂಡವಾಳ ಹೂಡಿಕೆ ಪ್ರೋತ್ಸಾಹಕಾ ಮಂಡಳಿ (ಎಫ್ಐಪಿಬಿ)ಯ ಅನುಮೋದನೆ ಸಿಕ್ಕಿತ್ತು. ಈ ಮೂಲಕ ಐಎನ್ಎಕ್ಸ್ ಮೀಡಿಯಾ ಸಂಸ್ಥೆಗೆ 305 ಕೋಟಿ ರೂ. ಮೊತ್ತದಷ್ಟು ವಿದೇಶಿ ಬಂಡವಾಳ ಹೂಡಿಕೆ ಲಭ್ಯವಾಗಿತ್ತು. ಆದರೆ ಪುತ್ರ ಕಾರ್ತಿ ಚಿದಂಬರಂ ಶಿಫಾರಸಿನ ಮೇಲೆ ಈ ಅನುಮೋದನೆಯನ್ನು ಚಿದಂಬರಂ ಕೊಟ್ಟಿದ್ದರು ಎಂಬ ಆರೋಪ ಕೇಳಿ ಬಂದಿತ್ತು.
ಈ ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಕಂದಾಯ ಸಚಿವಾಲಯ ವಿಚಾರಣೆಗೆ ಆದೇಶಿಸಿತ್ತು. ಈ ಸಂದರ್ಭದಲ್ಲಿ ಪಿ ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂ ಅವರು ಮಧ್ಯಸ್ಥಿಕೆ ವಹಿಸಿ, ತಂದೆಯ ಪ್ರಭಾವವನ್ನು ಬಳಸಿಕೊಂಡು ವಿಚಾರಣೆಯನ್ನು ತಪ್ಪಿಸಲು ತಮ್ಮ ಕಂಪನಿಯ ಮೂಲಕ 10 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಸಿಬಿಐ, 2017ರಲ್ಲಿ ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಂ ಮತ್ತಿತರರ ವಿರುದ್ಧ ಎಫ್ಐಆರ್ ದಾಖಲಿಸಿ ಬಂಧಿಸಿತ್ತು.