
ಬೆಂಗಳೂರು, ಡಿ.11- ಕಾಂಗ್ರೆಸ್ ನಾಯಕ ಸ್ಥಾನದ ಸಹವಾಸ ಬೇಡ, ವರಿಷ್ಠರು ಬಯಸಿದರೆ ವಿರೋಧ ಪಕ್ಷದ ನಾಯಕ ಸ್ಥಾನವನ್ನು ನಿಭಾಯಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್ಗೆ ಸಂದೇಶ ರವಾನಿಸಿದ್ದಾರೆ.
ಉಪಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ನಾಯಕ ಸ್ಥಾನಕ್ಕೆ, ದಿನೇಶ್ ಗುಂಡುರಾವ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಇದು ಸಾರ್ವತ್ರಿಕ ಚುನಾವಣೆಯಲ್ಲ. ಉಪಚುನಾವಣೆಗಳಲ್ಲಿ ಫಲಿತಾಂಶ ಯಾವಾಗಲೂ ಆಡಳಿತ ಪಕ್ಷದ ಪರವಾಗಿಯೇ ಇರುತ್ತದೆ. ಅದಕ್ಕೆ ನೀವು ರಾಜಿನಾಮೆ ಕೊಡುವ ಅಗತ್ಯ ಇಲ್ಲ ಎಂದು ಕರ್ನಾಟಕ ಕಾಂಗ್ರೆಸ್ನ ಉಸ್ತುವಾರಿ ನಾಯಕ ಕೆ.ಸಿ.ವೇಣುಗೋಪಾಲ್ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ. ಅದಕ್ಕೆ ಒಪ್ಪದ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕತ್ವದ ಸಹವಾಸವೇ ಬೇಡ ಎಂದು ಹಠ ಹಿಡಿದಿದ್ದಾರೆ.
ತಮ್ಮ ಸರ್ಕಾರ ಭದ್ರ ಮಾಡಿಕೊಳ್ಳಲು ಬಿಜೆಪಿ ಪದೇ ಪದೇ ಆಪರೇಷನ್ ಕಮಕ್ಕೆ ಕೈ ಹಾಕುತ್ತಿರುತ್ತದೆ. ಉಪಚುನಾವಣೆ ನಂತರ ಬಿಜೆಪಿ ಸರ್ಕಾರ ಸುಭದ್ರವಾಗಿದ್ದರೂ ಆಪರೇಷನ ಕಮಲ ನಿಂತಿಲ್ಲ. ಇನ್ನಷ್ಟು ಕಾಂಗ್ರೆಸ್ ಶಾಸಕರು ಬಿಜೆಪಿಯತ್ತ ಮುಖ ಮಾಡಿದ್ದಾರೆ. ಅವರಲ್ಲಿ ಬಹುತೇಕರು ತಮ್ಮ ಆತ್ಮೀಯರು ಇದ್ದಾರೆ. ಒಂದು ವೇಳೆ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಪಕ್ಷಾಂತರ ಮಾಡಿದರೆ ಮತ್ತೆ ತಮ್ಮ ಮೇಲೆಯೇ ಗೂಬೆ ಕೂರಿಸಲಾಗುತ್ತದೆ. ಹಾಗಾಗಿ ಶಾಸಕಾಂಗ ಪಕ್ಷದ ನಾಯಕತ್ವ ಸ್ಥಾನದಿಂದ ತಮ್ಮನ್ನು ಮುಕ್ತಗೊಳಿಸಿ ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಹೈಕಮಾಂಡ್ ಬಯಸಿದರೆ ವಿರೋಧ ಪಕ್ಷದ ನಾಯಕ ಸ್ಥಾನ ನಿಭಾಯಿಸುತ್ತೇನೆ. ಸುದೀರ್ಘ ರಾಜಕೀಯ ಅನುಭವದ ಆಧಾರದ ಮೇಲೆ ಬಿಜೆಪಿ ಸರ್ಕಾರದ ಹುಳುಕುಗಳನ್ನು ಬಯಲು ಮಾಡುತ್ತೇನೆ. ಸದನದ ಒಳಗೆ ಸರ್ಕಾರವನ್ನು ಕಟ್ಟಿ ಹಾಕುವ ಕೆಲಸ ಮಾಡಬಲ್ಲೆ. ಅದರ ಹೊರತಾಗಿ ಶಾಸಕಾಂಗ ಪಕ್ಷದ ಉಸಾಬರಿ ಬೇಡ ಎಂದಿದ್ದಾರೆ.
ಈಗಾಗಲೇ ಹರ್ಯಾಣ ಮತ್ತು ಮಹಾರಾಷ್ಟ್ರದಲ್ಲಿ ಹಾಗೂ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನ ಮತ್ತು ಶಾಸಕಾಂಗ ಪಕ್ಷದ ನಾಯಕ ಸ್ಥಾನ ಎರಡನ್ನು ಪ್ರತ್ಯೇಕಗೊಳಿಸಲಾಗಿದೆ. ಅದೇ ರೀತಿ ಕರ್ನಾಟಕದಲ್ಲೂ ಹುದ್ದೆಗಳನ್ನು ಪ್ರತ್ಯೇಕಗೊಳಿಸಿ ಎಂದು ಸಿದ್ದರಾಮಯ್ಯ ಹೈಕಮಾಂಡ್ಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯ ಅವರನ್ನು ಮನವೋಲಿಸಲು ಸಾಕಷ್ಟು ಕಸರತ್ತು ನಡೆಸಿರುವ ಕೆ.ಸಿ.ವೇಣುಗೋಪಾಲ್ ಕೊನೆಗೆ ಎರಡು ಸೂತ್ರಗಳನ್ನು ಸಿದ್ದರಾಮಯ್ಯ ಅವರ ಮುಂದಿಟ್ಟಿದ್ದಾರೆ ಎನ್ನಲಾಗಿದೆ. ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಬೇರೆಯವರನ್ನು ನೇಮಿಸಲು ತಾವು ಹೈಕಮಾಂಡ್ ಮನವೋಲಿಸುತ್ತೇವೆ. ನೀವು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಳ್ಳಿ ಎಂದು ಸಲಹೆ ಮಾಡಿದ್ದಾರೆ ಎನ್ನಲಾಗಿದೆ.
ಆದರೆ ಸದ್ಯಕ್ಕೆ ಪಕ್ಷದ ಪ್ರಮುಖ ಜವಾಬ್ದಾರಿ ವಹಿಸಿಕೊಳ್ಳಲು ಸಿದ್ದರಾಮಯ್ಯ ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ. ಇದು ಕಾಂಗ್ರೆಸ್ ಹೈಕಮಾಂಡ್ಗೆ ತಲೆ ನೋವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಅವರನ್ನು ಕೈ ಬಿಟ್ಟರೆ ಮುಂದಿನ ದಿನಗಳಲ್ಲಿ ರಾಜಕಾರಣದ ಮೇಲಾಗುವ ಪರಿಣಾಮಗಳ ಬಗ್ಗೆ ಹೈಕಮಾಂಡ್ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ.