ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯುವುದಿಲ್ಲ-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಡಿ.12-ವಿಪಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ವಾಪಸ್ ಪಡೆಯುವುದಿಲ್ಲ. ಪಕ್ಷ ಪರ್ಯಾಯ ನಾಯಕರಿಗೆ ಅವಕಾಶ ಕಲ್ಪಿಸಿಕೊಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ.

ಸೋನಿಯಾಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹಮ್ಮದ್‍ಪಟೇಲ್ ಖುದ್ದಾಗಿ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ, ಪ್ರಸ್ತುತ ಸಂದರ್ಭದಲ್ಲಿ ಪಕ್ಷದ ಮೇಲೆ ಒತ್ತಡಗಳು ಹೆಚ್ಚುತ್ತಿವೆ. ಕಷ್ಟ ಕಾಲದಲ್ಲಿ ನೀವು ಹಠ ಮಾಡಬೇಡಿ, ರಾಜೀನಾಮೆ ಹಿಂಪಡೆಯಿರಿ ಎಂದು ಮನವೊಲಿಸುವ ಪ್ರಯತ್ನ ಮಾಡಿದ್ದಾರೆ.

ಆದರೆ, ಇದಕ್ಕೆ ಒಪ್ಪದ ಸಿದ್ದರಾಮಯ್ಯ ಅವರು, ರಾಜ್ಯದ ಬಹುತೇಕ ನಾಯಕರು ಪಕ್ಷದ ಆಂತರಿಕ ಸಭೆಗಳಲ್ಲಿ ತಮ್ಮ ನಾಯಕತ್ವ ವಿರುದ್ಧ ಮಾತನಾಡಿದ್ದಾರೆ.

ಅದು ಸಭೆಯ ಬಳಿಕ ಹೊರ ಜಗತ್ತಿಗೂ ವಿಷಯ ಗೊತ್ತಾಗಿದೆ. ಇದರಿಂದಾಗಿ ಪಕ್ಷದಲ್ಲಿ ಶಿಸ್ತು ಕಡಿಮೆಯಾಗುತ್ತಿದೆ. ನಾಯಕರಲ್ಲಿ ಬದ್ಧತೆಯೂ ಇಲ್ಲದಾಗಿದೆ. ವಿಪಕ್ಷ ನಾಯಕನಾದ ತಕ್ಷಣ ಎಲ್ಲವನ್ನೂ ತಮ್ಮ ಮೇಲೆ ಹೊರಿಸಿ ಉಳಿದವರು ಆರಾಮಾಗಿ ಇರುವ ಪ್ರಯತ್ನ ಮಾಡುತ್ತಿದ್ದಾರೆ. ಚುನಾವಣೆ ಸೋಲಿ ಸಂದರ್ಭದಲ್ಲಿ ತಮ್ಮನ್ನು ಹೊಣೆ ಮಾಡಲಾಗುತ್ತಿದೆ ಎಂದು ಅಸಮಾಧಾನ ತೋಡಿಕೊಂಡಿದ್ದಾರೆ.

ಪಕ್ಷ ಈವರೆಗೂ ಸಾಕಷ್ಟು ಅವಕಾಶಗಳನ್ನು ನೀಡಿದೆ. ಮುಂದಿನ ದಿನಗಳಲ್ಲಿ ಶಾಸಕನಾಗಿಯೇ ಮುಂದುವರೆಯುತ್ತೇನೆ. ಪಕ್ಷ ವಹಿಸಿದ ಜವಾಬ್ದಾರಿಗಳನ್ನು ನಿರ್ವಹಿಸುತ್ತೇನೆ. ಆದರೆ, ಶಾಸಕಾಂಗ ಪಕ್ಷದ ನಾಯಕ ಸ್ಥಾನ ಮಾತ್ರ ಬೇಡ ಎಂದು ಸಿದ್ದರಾಮಯ್ಯ ಹೈಕಮಾಂಡ್ ಬಳಿ ಹೇಳಿದ್ದು, ಈವರೆಗೂ ಯಾವುದೇ ಮನವೊಲಿಕೆಗೆ ಒಪ್ಪಿಲ್ಲ ಎಂದು ಹೇಳಲಾಗಿದೆ.

ಈ ನಡುವೆ ಸಿದ್ದರಾಮಯ್ಯ ಅವರ ಆರೋಗ್ಯ ಕೂಡ ಹದಗೆಟ್ಟಿದ್ದು, ನಿನ್ನೆ ಆಸ್ಪತ್ರೆಗೆ ದಾಖಲಾಗಿ ಹೃದಯ ರಕ್ತನಾಳಗಳಿಗೆ ಸ್ಟಂಟ್ ಅಳವಡಿಸಿಕೊಂಡಿದ್ದಾರೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಲು ನಿನ್ನೆ ರಾತ್ರಿ ಕೂಡ ಅಹಮ್ಮದ್ ಪಟೇಲ್ ಅವರು ದೂರವಾಣಿ ಮೂಲಕ ಮಾತನಾಡಿದ್ದಾರೆ.

ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದಾರೆ ಎಂದು ಅಹಮ್ಮದ್ ಪಟೇಲ್ ಅವರು ಸಿದ್ದರಾಮಯ್ಯ ಅವರಿಗೆ ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ