ಬೆಂಗಳೂರು,ಡಿ.12- ಉಪಚುನಾವಣೆಯಲ್ಲಿ ಗೆದ್ದಿರುವ ಇಬ್ಬರು ಶಾಸಕರಿಗೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆಗಳು ಕ್ಷೀಣಿಸಿವೆ.
ಬೆಳಗಾವಿ ಜಿಲ್ಲೆ ಅಥಣಿಯಿಂದ ಗೆದ್ದಿರುವ ಮಹೇಶ್ ಕುಮಟಳ್ಳಿ, ಕಾಗವಾಡದಿಂದ ಗೆದ್ದಿರುವ ಶ್ರೀಮಂತ್ಪಾಟೀಲ್ ಅವರುಗಳನ್ನು ಸಚಿವ ಸಂಪುಟ ವಿಸ್ತರಣೆ ವೇಳೆ ಪರಿಗಣಿಸದಿರಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಈ ಹಿಂದೆ ಉಪಚುನಾವಣೆಯಲ್ಲಿ ಗೆದ್ದ ಎಲ್ಲ ಶಾಸಕರಿಗೆ ಮಂತ್ರಿ ಸ್ಥಾನ ಸಿಗಲಿದೆ ಎಂದು ಹೇಳಲಾಗಿತ್ತು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ 11 ಮಂದಿ ಶಾಸಕರ ಪೈಕಿ 9 ಶಾಸಕರನ್ನು ಮಾತ್ರ ಸಂಪುಟಕ್ಕೆ ತೆಗೆದುಕೊಳ್ಳಲು ಬಿಎಸ್ವೈ ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಈಗಾಗಲೇ ಮಹೇಶ್ ಕುಮಟಳ್ಳಿ ಮತ್ತು ಶ್ರೀಮಂತ ಪಾಟೀಲ್ ಅವರುಗಳಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ಇದಕ್ಕೆ ಈ ಇಬ್ಬರೂ ಶಾಸಕರು ಸಮ್ಮತಿಸಿದ್ದಾರೆ ಎಂದು ಹೇಳಲಾಗಿದೆ.
ಮಂತ್ರಿ ಸ್ಥಾನದ ಬದಲಿಗೆ ಇಬ್ಬರಿಗೂ ಪ್ರಬಲವಾದ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಿ ಅಸಮಾಧಾನ ಹೋಗಲಾಡಿಸಲು ಬಿಎಸ್ವೈ ತಂತ್ರ ರೂಪಿಸಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೊದಲೇ ಕುಮಟಳ್ಳಿ ಮತ್ತು ಶ್ರೀಮಂತ್ ಪಾಟೀಲ್ಗೆ ಈ ಬಗ್ಗೆ ಸ್ಪಷ್ಟವಾಗಿ ಮಾಹಿತಿ ನೀಡಲಾಗಿತ್ತು.
ತಮ್ಮನ್ನು ಸಂಪುಟಕ್ಕೆ ತೆಗೆದುಕೊಳ್ಳುವ ಬದಲು ರಮೇಶ್ ಜಾರಕಿಹೊಳಿ ಅವರಿಗೆ ಜಲಸಂಪನ್ಮೂಲ ಹಾಗೂ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ಬೇಡಿಕೆಯನ್ನು ಅವರು ಮುಂದಿಟ್ಟಿದ್ದರು.
ರಮೇಶ್ ಜಾರಕಿಹೊಳಿಗೆ ಡಿಸಿಎಂ ಸ್ಥಾನ ನೀಡುವ ಬಗ್ಗೆ ಈವರೆಗೂ ಯಾವುದೇ ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಆದರೆ ಅವರಿಷ್ಟದಂತೆ ಜಲಸಂಪನ್ಮೂಲ ಖಾತೆಯನ್ನು ನೀಡಲು ಬಿಎಸ್ವೈ ಸಮ್ಮತಿಸಿದ್ದಾರೆ ಎನ್ನಲಾಗುತ್ತಿದೆ.
ಒಂದು ವೇಳೆ ಕುಮಟಳ್ಳಿ ಮತ್ತು ಶ್ರೀಮಂತಪಾಟೀಲ್ ಸಂಪುಟದಿಂದ ದೂರ ಉಳಿದರೆ ಮಾಜಿ ಸಚಿವ ಉಮೇಶ್ ಕತ್ತಿ ಹಾಗೂ ಕರಾವಳಿ ಭಾಗದಿಂದ ಎಸ್.ಅಂಗಾರ ಸಚಿವರಾಗುವ ಸೌಭಾಗ್ಯ ಒದಗಿಬರಲಿದೆ.