ಈಶಾನ್ಯ ರಾಜ್ಯಗಳಲ್ಲಿ ಭುಗಿಲೆದ್ದಿರುವ ಹಿಂಸಾತ್ಮಕ ಪ್ರತಿಭಟನೆ-ಲೋಕಸಭೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ವಾದ-ವಾಗ್ವಾದ

ನವದೆಹಲಿ, ಡಿ.12- ಪೌರತ್ವ ತಿದ್ದುಪಡಿ ಕಾಯ್ದೆ ಮಸೂದೆ ವಿರೋಧಿಸಿ ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಭುಗಿಲೆದ್ದಿರುವ ಹಿಂಸಾತ್ಮಕ ಪ್ರತಿಭಟನೆ ಲೋಕಸಭೆಯಲ್ಲಿಂದು ಪ್ರತಿಧ್ವನಿಸಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ವಾದ-ವಾಗ್ವಾದಕ್ಕೆ ಕಾರಣವಾಯಿತು.

ಸರ್ಕಾರದ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದ ಪ್ರಸಂಗವೂ ಜರುಗಿತು.

ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌದರಿ ಶೂನ್ಯ ವೇಳೆಯಲ್ಲಿ ಅಸ್ಸಾಂ ಹಿಂಸಾಚಾರವನ್ನು ಪ್ರಸ್ತಾಪಿಸಿ ಮಸೂದೆಯಿಂದ ಈಶಾನ್ಯ ರಾಜ್ಯ ಹೊತ್ತಿ ಉರಿಯುತ್ತಿದೆ. ಇದಕ್ಕೆ ಸರ್ಕಾರವೇ ಕಾರಣ ಎಂದು ಆರೋಪಿಸಿದರು.

ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಈಶಾನ್ಯ ರಾಜ್ಯದಲ್ಲಿ ಹಿಂಸಾಚಾರ ನಡೆಯಲು ಕಾಂಗ್ರೆಸ್ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಏರಿದ ಧ್ವನಿಯಲ್ಲಿ ಮಾತಿನ ಚಕಮಕಿ, ವಾದ-ವಾಗ್ವಾದ ನಡೆಯಿತು.
ಪ್ರಹ್ಲಾದ್ ಜೋಷಿ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಸದಸ್ಯರು ಸದನದಿಂದ ಹೊರ ನಡೆದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ