ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ- ಕೇರಳ ಮತ್ತು ಪಂಜಾಬ್ ಸರ್ಕಾರಗಳು ವಿರೋಧ-ಬೆನ್ನಲ್ಲೇ ಪಶ್ಚಿಮ ಬಂಗಾಳ ಸರ್ಕಾರ ಕೂಡ ಆಕ್ಷೇಪ

ಕೋಲ್ಕತ್ತಾ, ಡಿ.13- ತೀವ್ರ ಹಿಂಸಾತ್ಮಕ ಪ್ರತಿಭಟನೆಗೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಕ್ಯಾಬ್) ಜಾರಿಗೆ ಕೇರಳ ಮತ್ತು ಪಂಜಾಬ್ ಸರ್ಕಾರಗಳು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಪಶ್ಚಿಮ ಬಂಗಾಳ ಸರ್ಕಾರ ಕೂಡ ಆಕ್ಷೇಪ ವ್ಯಕ್ತಪಡಿಸಿದೆ.

ತನ್ನ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಯ್ದೆ ಜಾರಿಯಾಗಲು ಬಿಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಬಿಗಿಪಟ್ಟು ಹಿಡಿದಿದೆ.

ನಿನ್ನೆಯಷ್ಟೇ ಕೇರಳ ಸಿಎಂ ಪಿಣರಾಯಿ ವಿಜಯನ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಕೇಂದ್ರ ಸರ್ಕಾರ ವಿವಾದಾತ್ಮಕ ಪೌರತ್ವ ತಿದ್ದುಪಡಿ ವಿಧೇಯಕವನ್ನು ತಮ್ಮ ರಾಜ್ಯಗಳಲ್ಲಿ ಜಾರಿಗೊಳಿಸಲು ಬಿಡುವುದಿಲ್ಲ ಎಂದು ಘೋಷಿಸಿದ್ದರು.

ಪೌರತ್ವ ಕೇಂದ್ರದ ವ್ಯಾಪ್ತಿಯಲ್ಲಿ ಬರುತ್ತದೆಯಾದರೂ ಶಾಸನವನ್ನು ಜಾರಿಗೊಳಿಸುವುದಕ್ಕೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಒತ್ತಾಯಿಸುವಂತಿಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಮಸೂದೆ ಭಾರತದ ಜಾತ್ಯತೀತತೆಗೆ ಧಕ್ಕೆ ಉಂಟು ಮಾಡುತ್ತದೆ. ಆದ್ದರಿಂದ ಇದನ್ನು ರಾಜ್ಯದಲ್ಲಿ ಅನುಮೋದಿಸುವುದಿಲ್ಲ ಎಂದು ಪಂಜಾಬ್ ಸಿಎಂ ಹೇಳಿದ್ದರು.

ಈಗ ಈ ಪಟ್ಟಿಗೆ ಪಶ್ಚಿಮ ಬಂಗಾಳ ಕೂಡ ಸೇರ್ಪಡೆಯಾಗಿದೆ. ತಾವು ಯಾವುದೇ ಕಾರಣಕ್ಕೂ ತಮ್ಮ ರಾಜ್ಯದಲ್ಲಿ ಸಿಎಬಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ