ಬೆಂಗಳೂರು, ಡಿ.17-ಡಿ.ಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಕಟ್ಟಲು ಮುಹೂರ್ತ ಫಿಕ್ಸ್ ಆದಂತಿದೆ.
ಜನವರಿ ಎರಡನೇ ವಾರ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಹೈಕಮಾಂಡ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಜ.20 ರಿಂದ ಅಧಿವೇಶನ ಆರಂಭವಾಗಲಿದ್ದು, ಅಷ್ಟರೊಳಗೆ ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅದೇ ರೀತಿ ವಿಧಾನಸಭೆ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಅವರನ್ನೇ ಮುಂದುವರೆಸಬೇಕೇ ಅಥವಾ ಬೇರೆಯವರನ್ನು ನೇಮಕ ಮಾಡಬೇಕೇ ಎಂಬ ಬಗ್ಗೆಯೂ ಕೂಡ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಸಿದ್ದರಾಮಯ್ಯ ಅವರೇ ಆ ಸ್ಥಾನದಲ್ಲಿ ಮುಂದುವರೆಯ ಬೇಕೆಂಬುದು ಹೈಕಮಾಂಡ್‍ನ ನಿಲುವಾಗಿದೆ.ಅ ವರ ಮನವೊಲಿಸುವ ಯತ್ನ ಕೂಡ ನಡೆದಿದೆ. ಅವರು ಒಪ್ಪಿದರೆ ಮುಂದುವರೆಸುವ ಸಾಧ್ಯತೆ ಇದೆ. ಅವರು ಒಪ್ಪದಿದ್ದರೆ ಬೇರೆಯವರನ್ನು ಹೈಕಮಾಂಡ್ ನೇಮಿಸಲಿದೆ. ಸದ್ಯದ ಪರಿಸ್ಥಿತಿಯಲ್ಲಿ ಬದಲಾವಣೆ ಮಾಡುವ ಸಾಧ್ಯತೆಗಳು ಕಡಿಮೆ ಎಂದು ಹೇಳಲಾಗುತ್ತಿದೆ. ಆದರೆ ಕಾಂಗ್ರೆಸ್ ಪಕ್ಷವನ್ನು ಪುನರ್ ರಚನೆ ಮಾಡಲು ಹೈಕಮಾಂಡ್ ಸಿದ್ಧತೆ ನಡೆಸಿದ್ದು, ಡಿ.ಕೆ.ಶಿವಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ಮಾಡುವುದು ಬಹುತೇಕ ಖಚಿತ ಎಂದು ಹೇಳಲಾಗಿದೆ.
ಡಿ.ಕೆ.ಶಿವಕುಮಾರ್ ಅವರು ಕೂಡ ಹಲವು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟಿದ್ದಾರೆ. ಇನ್ನು ಮೂರು ದಿನಗಳ ನಂತರ ದೆಹಲಿಗೆ ತೆರಳಲಿದ್ದು, ವರಿಷ್ಠರ ಜೊತೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
ಕಳೆದ ವಾರ ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲೇ ಡಿ.ಕೆ.ಶಿವಕುಮಾರ್ ಅವರಿಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಜನವರಿಯಲ್ಲಿ 13ರ ನಂತರ ಹೈಕಮಾಂಡ್ ಅನುಮತಿ ನೀಡಲಿದೆ. ಈ ಬಗ್ಗೆ ಡಿಕೆಶಿ ತಮ್ಮ ಆಪ್ತರೊಂದಿಗೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.
ಪ್ರಸ್ತುತ ಕಾಂಗ್ರೆಸ್ ಪರಿಸ್ಥಿತಿ ನೋಡಿದರೆ ಪ್ರಭಾವಿ ಸಮುದಾಯದ ಮುಖಂಡರು ನಾಯಕತ್ವ ವಹಿಸಿಕೊಳ್ಳಬೇಕಾದ ಅಗತ್ಯತೆ ಮತ್ತು ಅನಿವಾರ್ಯತೆ ಇದೆ.
ಡಿ.ಕೆ.ಶಿವಕುಮಾರ್ ಅವರು ಪ್ರಬಲ ನಾಯಕರಾಗಿ ಹೊರಹೊಮ್ಮಿದ್ದಾರೆ. ಪಕ್ಷದ ನಿಷ್ಠಾವಂತ ನಾಯಕರಾಗಿದ್ದಾರೆ. ಹಾಗಾಗಿ ಅವರಿಗೆ ಈ ಹುದ್ದೆ ವಹಿಸುವುದು ಸೂಕ್ತ ಎಂಬ ಅಭಿಪ್ರಾಯ ಹೆಚ್ಚಾಗಿ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಜನವರಿ ಎರಡನೇ ವಾರ ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಲಿದ್ದಾರೆ ಎಂಬುದು ಬಹುತೇಕ ಖಚಿತವಾಗಿದೆ.