ನವದೆಹಲಿ, ಡಿ.16- ದೆಹಲಿಯಲ್ಲಿ ನಡೆದ ವಿದ್ಯಾರ್ಥಿಗಳ ಮೇಲಿನ ಪೋಲೀಸರ ಲಾಠಿ ಚಾರ್ಜ್ ಖಂಡಿಸಿ ಇಂದು ದೇಶದ ಹಲವೆಡೆ ಪ್ರತಿಭಟನೆಗಳು ನಡೆದಿದೆ.
ಮುಂಬೈನ ಟಾಟಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಇಂದು ಬೆಳಗ್ಗೆ ದಿಢೀರ್ ಪ್ರತಿಭಟನೆ ನಡೆಸಿ ತಪ್ಪಿತಸ್ಥ ಪೋಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿ ಸಮುದಾಯಗಳ ಮೇಲೆ ದಬ್ಬಾಳಿಕೆ ನಿಲ್ಲಬೇಕು ಎಂದು ಒತ್ತಾಯಿಸಿದರು.
ಇತ್ತ ಹೈದರಾಬಾದ್ನಲ್ಲೂ ಕೂಡ ಮೌಲಾನಾ ಆಜಾದ್ ಉರ್ದು ವಿವಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿ ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ಕಿಡಿಕಾರಿದ್ದಾರೆ.
ರಸ್ತೆಗಳಲ್ಲಿ ಟೈರ್ಗಳಿಗ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಲಕ್ನೋನ ನಾದ್ವಾ ವಿವಿ ವಿದ್ಯಾರ್ಥಿಗಳು ಕೂಡ ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿ ಕೂಡಲೇ ಪೌರತ್ವ ಕಾಯಿದೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಕಲ್ಲು ತೂರಾಟ ನಡೆದಿದ್ದು , ಪೋಲೀಸರು ಪರಿಸ್ಥಿತಿಯನ್ನು ತಹಬದಿಗೆ ತರಲು ಲಾಠಿ ಬೀಸಿದ್ದಾರೆ.
ಕರ್ನಾಟಕದ ಬಳ್ಳಾರಿ ಹಾಗೂ ಹೊಸಪೇಟೆಯಲ್ಲಿ ಕೆಲ ಮುಸ್ಲಿಂ ಸಂಘಟನೆಗಳು ಪ್ರತಿಭಟನಾ ರ್ಯಾಲಿಗಳನ್ನು ನಡೆಸಿದ್ದು ಪೋಲೀಸರ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಇದರ ನಡುವೆ ಹೈಕೋರ್ಟ್ನಲ್ಲೂ ಕೂಡ ಪಿಎಎಲ್ ಸಲ್ಲಿಸಲಾಗಿದೆ.