ನವದೆಹಲಿ, ಡಿ.16- ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಆವರಣದಲ್ಲಿ ನಿನ್ನೆ ರಾತ್ರಿ ಭುಗಿಲೆದ್ದ ಹಿಂಸಾತ್ಮಕ ಪ್ರತಿಭಟನೆ ವೇಳೆ ಬಂಧಿತರಾಗಿದ್ದ ಎಲ್ಲಾ 50 ವಿದ್ಯಾರ್ಥಿಗಳನ್ನು ಇಂದು ಬೆಳಗ್ಗೆ ಬಿಡುಗಡೆಗೊಳಿಸಲಾಗಿದೆ.
ದೆಹಲಿ ಶಾಂತ ಸ್ಥಿತಿಯತ್ತ ಮರಳುತ್ತಿದ್ದರೂ ಬೂದಿ ಮುಚ್ಚಿದ ಕೆಂಡದಂತಹ ವಾತಾವರಣವಿದ್ದು , ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.
ಯಾವುದೇ ಅಹಿತಕರ ಘಟನೆಗಳು ಮತ್ತೆ ಭುಗಿಲೇಳುವುದನ್ನು ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ದೆಹಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. 4 ಬಸ್, 2 ಅಗ್ನಿಶಾಮಕ ವಾಹನಗಳು ಹಾಗೂ ಅನೇಕ ದ್ವಿಚಕ್ರ ವಾಹನಗಳು ಅಗ್ನಿಗೆ ಆಹುತಿಯಾಗಿವೆ.
ಜೆಎಂಐ ವಿಶ್ವವಿದ್ಯಾಲಯ ಆವರಣ ನಿನ್ನೆ ರಾತ್ರಿ ಅಕ್ಷರಶಃ ರಣರಂಗವಾಗಿದ್ದು , ಹಿಂಸಾಚಾರ , ದಾಂಧಲೆಯಲ್ಲಿ ತೊಡಗಿದ್ದ ವಿದ್ಯಾರ್ಥಿಗಳನ್ನು ಚದುರಿಸಲು ಪೋಲೀಸರು ಲಾಠಿ ಪ್ರಹಾರ ಮತ್ತು ಅಶ್ರು ವಾಯು ಪ್ರಯೋಗಿಸಿದರು.
ಈ ವೇಳೆ ಹಿಂಸಾಚಾರ ನಿಯಂತ್ರಣಕ್ಕೆ ಪೋಲೀಸರು ನಡೆಸಿದ ಲಾಠಿ ಚಾರ್ಜ್‍ನಲ್ಲಿ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಕಳೆದ ರಾತ್ರಿಯಷ್ಟೇ ದೆಹಲಿ ಅಲ್ಪಸಂಖ್ಯಾತ ಆಯೋಗ ಕಲ್ಕಾಜಿ ಪೋಲೀಸ್ ಠಾಣಾಧಿಕಾರಿಗಳಿಗೆ ನಿರ್ದೇಶನವೊಂದನ್ನು ನೀಡಿತ್ತು. ಹಿಂಸಾಚಾರದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನು ಪೋಲೀಸರು ವಶಕ್ಕೆ ಪಡೆದುಕೊಂಡಿದ್ದು, ಕೂಡಲೇ ಅವರನ್ನು ಬಿಡುಗಡೆಗೊಳಿಸಿ, ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕೆಂದು ಆಗ್ರಹಿಸಿತ್ತು. ಅಲ್ಲದೆ, ಮೂರುಗಂಟೆಯೊಳಗಾಗಿ ಈ ಕುರಿತು ವರದಿ ಸಲ್ಲಿಸುವಂತೆ ಸೂಚಿಸಿತ್ತು.
ಬಂಧಿತ ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸಿದ ಬಳಿಕ ದೆಹಲಿ ಸಹಜ ಸ್ಥಿತಿಯತ್ತ ಮರಳುತ್ತಿದೆ. ನಿನ್ನೆ ರಾತ್ರಿಯಿಂದ ರದ್ದುಗೊಳಿಸಲಾಗಿದ್ದ ಎಲ್ಲಾ ಮಾರ್ಗಗಳ ಮೆಟ್ರೋ ರೈಲು ಸೇವೆ ಇಂದು ಬೆಳಗ್ಗೆ ಪುನರಾರಂಭಗೊಂಡಿದೆ.
ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಬಿಗುವಿನ ಪರಿಸ್ಥಿತಿ ಮುಂದುವರೆದಿದ್ದು , ಮಹಿಳಾ ವಿದ್ಯಾರ್ಥಿಗಳು ತಮ್ಮ ಮನೆಗಳಿಗೆ ತೆರಳಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಆಗ್ನೇಯ ದೆಹಲಿಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.
ದೆಹಲಿಯಲ್ಲಿ ಬೂದಿ ಮುಚ್ಚಿದ ಕೆಂಡದ ವಾತಾವರಣ ನೆಲೆಸಿರುವ ಹಿನ್ನೆಲೆಯಲ್ಲಿ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ.
ಅತ್ತ ಉತ್ತರ ಪ್ರದೇಶದ ಅಲಿಗಢ ಸೇರಿದಂತೆ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿದ್ದು , ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮನವಿ ಮಾಡಿದ್ದಾರೆ.